ಸಿದ್ದರಾಮಯ್ಯ ಬಂಧನವಾದರೆ ರಾಜೀನಾಮೆ ಖಚಿತ

New Bellad 2
Published on


ಹುಬ್ಬಳ್ಳಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಇಡಿ, ಸಿದ್ದರಾಮಯ್ಯ ಅವರ ಬಂಧನಕ್ಕೆ ಮುಂದಾದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಹೇಳಿದರು.
ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಶುಕ್ರವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರವಿಂದ ಬೆಲ್ಲದ, ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಮಾಡಿದ ಮುಖ್ಯಮಂತ್ರಿ ಅವರ ಹೆಸರಿನಲ್ಲಿ ಸಿದ್ದರಾಮಯ್ಯ ಮೊದಲಿಗರಾಗಿರುತ್ತಾರೆ ಎಂದು ವ್ಯಂಗ್ಯವಾಡಿದರು.
ಇಡಿ, ಐಟಿ ಸಂಸ್ಥೆಗಳು ಸ್ವತಂತ್ರ ಸಂಸ್ಥೆಗಳಾಗಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತವೆ. ಈ ಸಂಸ್ಥೆಗಳನ್ನು ಕೇಂದ್ರದ ಕೈಗೊಂಬೆಯೆಂದು ಟೀಕಿಸುವುದು ಸರಿಯಲ್ಲ ಎಂದರು.
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರದ ವಿರುದ್ಧ ಅ. 25ರಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಕೇಂದ್ರ ಹಾಗೂ ರಾಜ್ಯದ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಳಗ್ಳುವರು ಎಂದು ತಿಳಿಸಿದರು.
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವುದುನ್ನು ಗಮನಿಸಿ ಕೆ.ಜೆ. ಹಳ್ಳಿ, ಡಿ.ಜೆ. ಹಳ್ಳಿ ಪುಂಡರು ಸಹ ತಮ್ಮ ಪ್ರಕರಣ ಹಿಂಪಡೆಯುವಂತೆ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಇದೇ ರೀತಿ ಗಲಭೆಕೋರರ ಎಲ್ಲ ಪ್ರಕರಣಗಳನ್ನು ಹಿಂಪಡೆದರೆ ಕರ್ನಾಟಕ ರಾಜ್ಯ ಬಿಹಾರದಂತೆ ಗುಂಡಾಗಳ ರಾಜ್ಯವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ರಾಜೀನಾಮೆ ನೀಡುವುದು ಖಚಿತ ಎಂಬುದನ್ನು ಅರಿತಿರುವ ಸಿದ್ದರಾಮಯ್ಯ, ತರಾತುರಿಯಲ್ಲಿ ಈ ರೀತಿಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಕಾಂಗ್ರೆಸ್​ನವರಿಗೆ ಮತಬ್ಯಾಂಕ್ ಅಂಧತ್ವ ಕಾಡುತ್ತಿದೆ ಎಂದರು.
ಪಂಚಮಸಾಲಿ ಸಮಾಜದ ಮೀಸಲಾತಿಗೆ ಸಂಬಂಧಿಸಿದಂತೆ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಅವರೊಂದಿಗೆ ರ್ಚಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಯ ನೀಡಿದ್ದಾರೆ. ಆದರೆ, ಮುಖ್ಯಮಂತ್ರಿ ಅವರಿಗೆ ಮುಸ್ಲಿಂರನ್ನು ಹೊರತುಪಡಿಸಿ ಬೇರೆ ಸಮುದಾಯದವರು ಕಾಣಿಸುವುದಿಲ್ಲ ಎಂದು ಟೀಕಿಸಿದರು.
ಬೇರೆ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ಶ್ರೀಜಯ ಮೃತ್ಯುಂಜಯ ಸ್ವಾಮೀಜಿ ಅವರೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿಯಾಗಲು ಆಗಲಿಲ್ಲ. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಯನ್ನಾದರೂ ಸರ್ಕಾರ ನೀಡಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net