

ಮೈಸೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಶನಿವಾರ ಹಮ್ಮಿಕೊಂಡಿದ್ದ ಎರಡನೇ ಹಂತದ ತರಬೇತಿ ಕೇಂದ್ರಗಳಿಗೆ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಭೇಟಿ ನೀಡಿ ಪರಿಶೀಲಿಸಿದರು.
ಪಿರಿಯಾಪಟ್ಟಣ, ಕೃಷ್ಣರಾಜ, ಚಾಮರಾಜ ಹಾಗೂ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಎರಡನೇ ಹಂತದ ತರಬೇತಿಯನ್ನು ನೀಡಲಾಗುತ್ತಿದ್ದು, ಯಾವುದೇ ಗೊಂದಲ ಇದ್ದರೂ ಪರಿಹರಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಏಪ್ರಿಲ್ 25 ಹಾಗೂ 26 ರಂದು ಮುಖ್ಯವಾಗಿ ಕಾರ್ಯನಿರ್ವಹಿಸಬೇಕಿರುವ ಅಂಶಗಳನ್ನು ಪಟ್ಟಿ ಮಾಡಿಕೊಂಡು ಮನನ ಮಾಡಿಕೊಳ್ಳಿ. ಮತದಾನದ ದಿನ ಯಾವುದೇ ಗೊಂದಲಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಶೇಖರ್, ಚಾಮರಾಜ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿ ವೆಂಕಟರಾಜು ಇತರೆ ಸಿಬ್ಬಂದಿ ಇದ್ದರು.