ಹೆಣ್ಣು ಮಕ್ಕಳನ್ನು ಗೌರವಿಸಿ

13adarshkdga1
Published on

 ಮಡಿಕೇರಿ: ಪ್ರತಿ ಮನೆಯ ಹೆಣ್ಣು ಮಗಳೂ ಶಿಕ್ಷಣವಂತರಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭಾ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ಹಾಗೂ ನಿಯಮ-2006ರ ಅನುಷ್ಠಾನದಲ್ಲಿ ಭಾಗಿದಾರ ಇಲಾಖೆಗಳ ಪಾತ್ರ ಕುರಿತು ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಓರಿಯಂಟೇಷನ್ ತರಬೇತಿ ಉದ್ಘಾಟಿಸಿ ಮಾತನಾಡಿದರು. ಎಲ್ಲ್ಲ ಹೆಣ್ಣು ಮಕ್ಕಳು ಪೂಜಿಸಲ್ಪಡುವವರಾಗಿದ್ದು, ಅವರಲ್ಲಿ ಅಷ್ಟದೇವತೆಗಳು ನೆಲೆಸಿರುತ್ತಾರೆ. ಸಮಾಜದಲ್ಲಿ ಮಹಿಳೆಯರಿಗೆ ಇರುವ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಪ್ರತಿ ಮನೆಯಲ್ಲೂ ಹೆಣ್ಣು ಮಕ್ಕಳನ್ನು ಗೌರವಿಸಬೇಕು ಎಂದು ಹೇಳಿದರು.

ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷರಾದ ರೆಹನಾ ಸುಲ್ತಾನ್ ಮಾತನಾಡಿ, ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮಾಜ ಸೇವೆಗೆ ಹೆಚ್ಚು ಒತ್ತು ನೀಡಿ ಸಮಾಜ ಸೇವೆಯಲ್ಲಿ ತೊಡಗಬೇಕು ಎಂದು ಹೇಳಿದರು.

ಪೊನ್ನಂಪೇಟೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪೂಣಚ್ಚ ಮಾತನಾಡಿ, ಶಿಶು ಅಭಿವೃದ್ಧಿ ಯೋಜನಾ ಇಲಾಖೆಯಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ನೊಂದ ಮಹಿಳೆಯರಿಗೆ ಆಪ್ತ ಸಮಾಲೋಚನೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾದ ವಕೀಲೆ ಮೀನಕುಮಾರಿ ಮಾತನಾಡಿ, ಮಕ್ಕಳ ಮೇಲೆ ನಡೆಸುವ ಲೈಂಗಿಕ ದೌರ್ಜನ್ಯ, ಕೌಟುಂಬಿಕ ದೌರ್ಜನ್ಯ, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ದೌರ್ಜನ್ಯ ತಡೆ ಕಾಯ್ದೆ 2013ರ ಕುರಿತು ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿ ಪೋಲಿಸ್ ಇಲಾಖೆಯ ಸುಮತಿ ಮಾತನಾಡಿ, ಮಹಿಳೆಯರಿಗೆ ಯಾವುದೇ ರೀತಿಯ ಸಮಸ್ಯೆಗಳಾದ್ದಲ್ಲಿ 112 ಗೆ ಕರೆ ಮಾಡಬೇಕು. ಮೊಬೈಲ್ ಚಟಕ್ಕೆ ಬಲಿಯಾಗಿ ಎಷ್ಟೋ ಹೆಣ್ಣು ಮಕ್ಕಳು ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವುದು ಕಂಡುಬರುತ್ತಿದೆ. ಆದರೆ, ಸರ್ಕಾರ ಮಹಿಳೆಯರ ರಕ್ಷಣೆ ಮತ್ತು ಸುಭದ್ರತೆಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳಲ್ಲಿ ಮಹಿಳಾ ಸಾಂತ್ವನಾ, ಮಹಿಳಾ ಸಹಾಯವಾಣಿ, ಮಹಿಳಾ ಸಬಲೀಕರಣ ಘಟಕ, ಸಖಿ ಸೆಂಟರ್ ಇವುಗಳ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸವಿತಾ, ಪ್ರಮುಖರಾದ ಜಯಂತಿ, ಕುಮುದ ಪ್ರಾರ್ಥಿಸಿದರು.

ಸಂಪನ್ಮೂಲ ವ್ಯಕ್ತಿಯಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮನಃಶಾಸ್ತ್ರಜ್ಞಯಾದ ಡಾ.ಯಾಮಿನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net