

ವಿಜಯವಾಣಿ ಸುದ್ದಿಜಾಲ ಧಾರವಾಡ
ಸಾರ್ವಜನಿಕರ ಮನವಿ ಪತ್ರಗಳನ್ನು ಕಚೇರಿ ಹಂತದಲ್ಲೇ ಪರಿಹರಿಸಲು ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಅಹವಾಲುಗಳ ಮನವಿ ಪತ್ರಗಳನ್ನು ಕೂಡಲೇ ಅಧಿಕಾರಿಗಳು ಸ್ವೀಕರಿಸಿ ಅವುಗಳಿಗೆ ಸೂಕ್ತ ಪರಿಹಾರ ನೀಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ನಗರದ ತಹಸೀಲ್ದಾರ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕ ಪಂಚಾಯಿತಿ ಹಾಗೂ ಹು-ಧಾ ಮಹಾನಗರ ಪಾಲಿಕೆ ಸಹಯೋಗದಲ್ಲಿ ಶನಿವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಜನತಾ ದರ್ಶನ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ಜನತಾ ದರ್ಶನ ಯಶಸ್ವಿಗೊಂಡ ನಂತರ ಸರ್ಕಾರ ತಾಲೂಕ ಮಟ್ಟದ ಜನತಾ ದರ್ಶನ ಏರ್ಪಡಿಸಿದೆ. ಸರ್ಕಾರದ ಹಂತದಲ್ಲಿ ಪರಿಹರಿಸಬೇಕಾದ ಮತ್ತು ಕೋರ್ಟ್‌ಗೆ ಸಂಬಂಧಿಸಿದ ಅಹವಾಲುಗಳನ್ನು ಹೊರತುಪಡಿಸಿ ಇತರೆ ಅಹವಾಲುಗಳನ್ನು ತಮ್ಮ ವ್ಯಾಪ್ತಿಯಲ್ಲಿ ಪರಿಹರಿಸಬಹುದು. ಅರ್ಜಿಗಳನ್ನು ಪರಿಹರಿಸಲು ಸಂಬಂಧಿಸಿದ ಇಲಾಖೆಗಳಿಗೆ ರವಾನಿಸಲಾಗುತ್ತದೆ. ತಮ್ಮ ಇಲಾಖೆ ವ್ಯಾಪ್ತಿಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಜನತಾ ದರ್ಶನ ಹೊರತಾಗಿಯು ಅಧಿಕಾರಿಗಳು ಸಾರ್ವಜನಿಕರಿಗೆ ಸಹಾಯ ಮಾಡಬೇಕು ಎಂದರು.
ಇದೇ ಸಂಧರ್ಭದಲ್ಲಿ ಜಾನುವಾರು ಮೇವಿನ ಬೀಜದ ಮಿನಿಕಿಟ್ ವಿತರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ಅಣಗೌಡರ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಇಮ್ತಿಯಾಜ್, ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ ಬೆನ್ನೂರು, ತಾಪಂ ಇಒ ಗಂಗಾಧರ ಕಂದಕೂರ, ತಾಲೂಕು ಮಟ್ಟದ ಅಧಿಕಾರಿಗಳು, ಇತರರು ಇದ್ದರು.
ತಹಸೀಲ್ದಾರ ದೊಡ್ಡಪ್ಪ ಹೂಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೇಘಾ ಪಾಟೀಲ ನಿರೂಪಿಸಿದರು. ಬಸವರಾಜ ಕುಲಾವಿ ವಂದಿಸಿದರು.