ಮಳೆಗಾಲದ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂಧಿಸಿ

New Abbayya New
Published on

ಹುಬ್ಬಳ್ಳಿ : ಮಳೆಗಾಲದಲ್ಲಿ ಸಂಭವಿಸುವ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಅಬ್ಬಯ್ಯ ಪ್ರಸಾದ ಹೇಳಿದರು.

ನಗರದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಆಗಿರುವ ಹಾನಿ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಬುಧವಾರ ಆಯೋಜಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಾದ್ಯಂತ ಅಪಾರ ಪ್ರಮಾಣದ ಮಳೆಯಾಗಿದೆ. ಸಾವಿರಾರು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದರು. ಸಾಕಷ್ಟು ಮನೆಗಳಿಗೆ ಹಾನಿಯಾಗಿದೆ. ಜನರಿಗೆ ಸರ್ಕಾರದಿಂದ ಪರಿಹಾರ ಒದಗಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಭವಿಷ್ಯದ 10 ರಿಂದ 15 ವರ್ಷದ ದೃಷ್ಟಿಕೋನವನ್ನು ಇಟ್ಟುಕೊಂಡು ಕಾಮಗಾರಿಗಳನ್ನು ಕೈಗೊಳ್ಳಬೇಕು. ಹಳೇ ಹುಬ್ಬಳ್ಳಿ ವೃತ್ತದ ರಸ್ತೆ ದುರಸ್ತಿಗೊಳಿಸಬೇಕಾಗಿದೆ. ಸರ್ಕಾರದಿಂದ ಹೆಚ್ಚಿನ ಅನುದಾನ ತಂದರೂ ಯಾವುದೇ ರೀತಿಯ ಪ್ರಯೋಜನವಾಗುತ್ತಿಲ್ಲ. ಅಧಿಕಾರಿಗಳು ಹೆಚ್ಚಿನ ಮುತುವರ್ಜಿಯಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಉತ್ತಮ ಕೆಲಸಗಳಾಗುತ್ತವೆ ಎಂದರು.

ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಮಳೆಯಿಂದ ಆಗಿರುವ ಹಾನಿ ಗಮನಿಸಬೇಕು. ಚರಂಡಿಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಯಾವುದೇ ರೀತಿಯಲ್ಲಿ ಕಲುಷಿತ ವಾತಾವರಣ ನಿಮಾಣವಾಗದಂತೆ, ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಉಣಕಲ್ ಕೆರೆಯಿಂದ ಗಬ್ಬೂರುವರೆಗೆ ಹರಿಯುವ ರಾಜ ಕಾಲುವೆಯನ್ನು ಸ್ವಚ್ಛಗೊಳಿಸಬೇಕು. ಜನರು ತ್ಯಾಜ್ಯವನ್ನು ಕಾಲುವೆಗೆ ಎಸೆಯದಂತೆ ಸೂಚಿಸಬೇಕು. ರಾಜ ಕಾಲುವೆ ತಡೆಗೋಡೆಗಳನ್ನು ಎತ್ತರಿಸುವ ಕುರಿತು ಗಮನ ಹರಿಸಬೇಕು. ರಾಜ ಕಾಲುವೆ ಒತ್ತುವರಿ ತೆರವುಗೊಳಿಸಬೇಕು. ಮ್ಯಾನ್​ಹೋಲ್​ಗಳನ್ನು ಸರಿಯಾಗಿ ಮುಚ್ಚಬೇಕು ಎಂದರು.

ಬೀಳುವ ಹಂತದಲ್ಲಿರುವ ಶಾಲಾ ಕಟ್ಟಡಗಳ ಮಾಹಿತಿ ಸಂಗ್ರಹಿಸಬೇಕು. ಈಗಾಗಲೇ ಪೆಂಡಾರ ಓಣಿ, ಬಿಡ್ನಾಳ, ಸದಾಶಿವ ನಗರ, ಕೌಲಪೇಟ ಶಾಲೆಗಳಿಗೆ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ದಿವ್ಯಪ್ರಭು ಮಾತನಾಡಿ, ಚರಂಡಿ, ನಾಲಾಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಬೇಸಿಗೆ ಅವಧಿಯಲ್ಲೇ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಆದರೆ, ಚರಂಡಿಗಳನ್ನು ಸ್ವಚ್ಛಗೊಳಿಸದಿರುವುದು ಗಮನಕ್ಕೆ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಮಾತನಾಡಿ, ಸುಮಾರು 1,188 ಮನೆಗಳಿಗೆ ಮಳೆ ನೀರು ನುಗ್ಗಿದೆ. 16 ಮನೆಗಳು ಬಿದ್ದು ಹೋಗಿವೆ. 3 ಮನೆಗಳಿಗೆ ಶೇ.50 ರಷ್ಟು ಹಾನಿಯಾಗಿದೆ ಎಂದು ತಿಳಿಸಿದರು.

ಹುಬ್ಬಳ್ಳಿ ಶಹರ ತಹಶೀಲ್ದಾರ ಕಲಗೌಡ ಪಾಟೀಲ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಗೌಡ್ರ, ಪಾಲಿಕೆ ಸಹಾಯಕ ಆಯುಕ್ತ ವಿಜಯಕುಮಾರ, ಸಹಾಯಕ ಪೊಲೀಸ್ ಆಯುಕ್ತ ರವೀಶ ಸಿ.ಆರ್., ಪಾಲಿಕೆ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡಪ್ಪನವರ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ಅಧೀಕ್ಷಕ ಇಂಜಿನಿಯರ್ ಟಿ.ಪ್ರದೀಪ, ಲೋಕೋಪಯೋಗಿ ಇಲಾಖೆಯ ಎಇಇ ಎಚ್.ಜಿ.ಗುಂಡಳ್ಳಿ, ವಲಯ ಸಹಾಯಕ ಆಯುಕ್ತರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ನೇಕಾರನಗರಕ್ಕೆ ಭೇಟಿ : ನೇಕಾರನಗರದ (ಸರ್ವಿಸ್ ರಸ್ತೆ ಹತ್ತಿರದ) ಕೆಳಹಂತದ ಸೇತುವೆ ಸ್ಥಳಕ್ಕೆ ಶಾಸಕ ಪ್ರಸಾಧ ಅಬ್ಬಯ್ಯ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲಿಸಿದರು. ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಕ್ತಾಯಗೊಳಿಸಬೇಕು. ಯಾವುದೇ ರೀತಿಯ ವಿಳಂಬವಾಗಬಾರದು. ರಾಜ ಕಾಲುವೆ ನೀರು ಹರಿದು ಹೋಗಲು ವ್ಯವಸ್ಥಿತ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಅನುಕೂಲಕ್ಕಾಗಿ ಸರ್ವಿಸ್ ರಸ್ತೆ ನಿರ್ವಿುಸಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net