

ಹಾಸನ: ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು, ಆಸ್ಪತ್ರೆಗಳಿಗೆ ಬರುವಂತಹ ರೋಗಿಗಳಿಗೆ ಸಕಾಲದಲ್ಲಿ ಸ್ಪಂದಿಸಿ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಅಪರ ಜಿಲ್ಲಾಧಿಕಾರಿ ಕೆ. ಟಿ ಶಾಂತಲಾ ಅವರು ಸೂಚನೆ ನೀಡಿದರು.
ಹಾಸನ ತಾಲೂಕು ವ್ಯಾಪ್ತಿಯ ಕಂಚನಹಳ್ಳಿ, ಮೊಸಳೆ ಹೊಸಹಳ್ಳಿ, ಅಂಕಪುರ, ಕಾರ್ಲೆ, ಗೊರೂರು ಆರೋಗ್ಯ ಕೇಂದ್ರಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಆಸ್ಪತ್ರೆಗಳಲ್ಲಿ ಬರುವಂತಹ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕು. ಗ್ರಾಮೀಣ ಭಾಗದಿಂದ ಆಸ್ಪತ್ರೆಗಳಿಗೆ ಭೇಟಿ ನೀಡುವ ಜನರಿಗೆ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಆಸ್ಪತ್ರೆ ಆವರಣ, ರೋಗಿಗಳು ಮತ್ತು ಸಿಬ್ಬಂದಿ ಉಪಯೋಗಿಸುವ ಶೌಚಾಲಯ ಸೇರಿದಂತೆ ಎಲ್ಲ ಕಡೆ ಹೆಚ್ಚಿನ ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು ಹಾಗೂ ಸಾರ್ವಜನಿಕರಿಗೆ ಯಾವುದೇ ಕಾಯಿಲೆಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು. ಆಸ್ಪತ್ರೆಗೆ ಬರುವಂತಹ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬಬೇಕು. ಜತೆಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ, ಮಾರ್ಗದರ್ಶನ ನೀಡಬೇಕು. ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ತಾಲೂಕು ಅಥವಾ ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವಂತೆ ತಿಳಿಸುವಂತೆ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿಗೆ ಸೂಚಿಸಿದರು.
ಸಿಬ್ಬಂದಿ ಇ- ಹಾಜರಾತಿ, ದಿನಚರಿ, ಆಸ್ಪತ್ರೆಯ ಸಾಮಾಗ್ರಿ ಪುಸ್ತಕ, ಔಷಧಗಳ ಪಟ್ಟಿ ಸೇರಿದಂತೆ ಮುಂತಾದ ದಾಖಲೆಗಳನ್ನು ಪರಿಶೀಲಿಸಿದರು.
ಇದೇ ವೇಳೆ ಹಾಸನ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಎಚ್.ಡಿ.ಗಿರೀಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ ಹಾಗೂ ಮತ್ತಿತರರು ಹಾಜರಿದ್ದರು.