

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಲ್ಲಿ ಮಹಿಳಾ ಸಿಬ್ಬಂದಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಕುರಿತು ತುರ್ತಾಗಿ ಮಾಹಿತಿ ಒದಗಿಸುವಂತೆ ಸರ್ಕಾರ ಸೂಚಿಸಿದೆ.
ಈ ಸಂಬಂಧ ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಬಿ. ವಿಮಲಾಕ್ಷಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಮಾ. 10ರೊಳಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.
ಬೆಂಗಳೂರಿನ ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಕೇಂದ್ರಗಳು ಸೇರಿ ರಾಜ್ಯಾದ್ಯಂತ ತಾಲೂಕು ಮತ್ತು ಜಿಲ್ಲಾ ಮಟ್ಟದ ಸರ್ಕಾರಿ ಕಚೇರಿಗಳಲ್ಲಿ ಮಹಿಳೆಯರಿಗೆ ವಿಶ್ರಾಂತಿ ಕೊಠಡಿಗಳು ಇಲ್ಲ. ಬಹುತೇಕ ಕಡೆಗಳಲ್ಲಿ ಪುರುಷರು ಹಾಗೂ ಮಹಿಳೆಯರು ಒಂದೇ ಶೌಚಗೃಹ ಬಳಕೆ ಮಾಡುತ್ತಿರುವ ಪರಿಸ್ಥಿತಿಯೂ ಇದೆ. ಹಾಗಾಗಿ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಕಲ್ಪಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ ಮನವಿ ಮಾಡಿತ್ತು. ಅದರಂತೆ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.