ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

udp laxmi hebbalkar helike
Published on

ಉಡುಪಿ: ವಕ್ಫ ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಇಲಾಖೆ ನೋಟಿಸ್​ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್​ ಸೊತ್ತುಗಳನ್ನು ರಾಷ್ಟ್ರೀಕರಣಗೊಳಿಸಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿಕೆ ಬಗ್ಗೆ ಮಾತನಾಡಲು ಏನೂ ಇಲ್ಲ. ಅವರಿಗೆ ಹಿಂದೂ - ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ. ಅದನ್ನು ಹೇಳಿಕೊಂಡೆ ಅವರು ಗೆದ್ದುಕೊಂಡು ಬಂದವರು. ಮಹಾತ್ಮ ಗಾಂಧಿ, ಅಂಬೇಡ್ಕರ್​ ಹೇಳಿ ಕೊಟ್ಟಂತೆ ಬದುಕುವವರು ನಾವು ಎಂದರು.

ಎಚ್​.ವಿಶ್ವನಾಥ್​ ಹೇಳಿಕೆಗೆ ಗರಂ

ಬಿಯರ್​ ರೇಟ್​ ಜಾಸ್ತಿ ಮಾಡಿ ಮಹಿಳೆಯರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಲಾಗುತ್ತಿದೆ ಎಂಬ ಮಾಜಿ ಸಚಿವ ಹಾಗೂ ವಿಧಾನ ಪರಿಷತ್​ ಸದಸ್ಯ ಎಚ್​.ವಿಶ್ವನಾಥ್​ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಮಹಿಳೆಯರಿಗೆ ಮೊದಲು ಗೌರವ ಕೊಡಿ, ಬಿಯರ್​ ಗಿಯರ್​ ಆಮೇಲೆ ಮಾತಾಡಿ. ಭಾಗ್ಯ ಯೋಜನೆಗಳಿಂದ ಜಿಡಿಪಿ ಜಾಸ್ತಿಯಾಗಿದೆ. ವಿಶ್ವನಾಥ್​ ಹಿರಿಯರು. ಮೊಸರಿನಲ್ಲಿ ಕಲ್ಲು ಹುಡುಕುವುದನ್ನು ಬಿಡಲಿ. ರಾಜ್ಯದಲ್ಲಿ, ದೇಶದಲ್ಲಿ ಮಹಿಳೆಯರಿಗೆ ಉತ್ತೇಜನ ಕೊಡಲು ಯೋಜನೆ ಮಾಡಿದ್ದೇವೆ. ಈಗ ರಾಜ್ಯದಲ್ಲಿ ಮಹಿಳಾ ಸಬಲೀಕರಣವಾಗಿದೆ. ಬಸವಣ್ಣನ ನಾಡಿನಲ್ಲಿ ಮಹಿಳೆಯರನ್ನು ಸರಿಸಮನಾಗಿ ಕಾಣಬೇಕು ಎಂದು ಹೇಳಿದರು.

ಕಾಂಗ್ರೆಸ್ಸಿಗರು ನಗರ ನಕ್ಸಲರು ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಉತ್ತರಿಸಿದ ಅವರು, ಪ್ರಧಾನಮಂತ್ರಿಗಳು ಯಾವ ಹಿನ್ನೆಲೆಯಲ್ಲಿ ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಪಕ್ಷಾತಿತವಾಗಿ ನರೇಂದ್ರ ಮೋದಿ ನಮ್ಮ ಪ್ರಧಾನಿಗಳು. ಪ್ರಧಾನಿ ಮೇಲೆ ನಮಗೆ ಗೌರವ ಇದೆ. ಕಾಂಗ್ರೆಸ್ಸನ್ನು ಗುರಿಯಾಗಿಸಿ ಅವರು ಈ ಮಾತನ್ನಾಡಿದ್ದರೆ ಅದು ಅಸಂವಿಧಾನಿಕ ಮಾತಾಗುತ್ತದೆ ಎಂದರು.

ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಜಾಸ್ತಿ

ಉಸ್ತುವಾರಿ ಸಚಿವೆ ಹಫ್ತಾ ವಸೂಲಿ ಮಾಡುತ್ತಾರೆ ಎಂಬ ಅಂಬೇಡ್ಕರ್​ ಯುವಸೇನೆಯ ಆರೋಪದ ಬಗ್ಗೆ ಮಾತನಾಡಿದ ಅವರು, ನಾನು ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಜಾಸ್ತಿ. ಹಫ್ತಾ ವಸೂಲಿ ಮಾಡುವ ಅನಿವಾರ್ಯತೆ, ಅವಶ್ಯಕತೆ ನನಗಿಲ್ಲ. ಹೆಸರು ಕೆಡಿಸುವವರು ಮಾತನಾಡುತ್ತಾರೆ. ಒಳ್ಳೆ ಭಾವನೆಯಿಂದ ರಾಜಕಾರಣ ಮಾಡುತ್ತಿದ್ದೇನೆ. ಮಾತನಾಡುವವರ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಶೀಘ್ರ ಜನತಾ ದರ್ಶನ ಮಾಡುತ್ತೇವೆ. ಜಿಲ್ಲಾಡಳಿತ ಜನತಾ ದರ್ಶನವನ್ನು ಮುಂದುವರೆಸುತ್ತದೆ. ಉಡುಪಿ ಜಿಲ್ಲೆಯಲ್ಲಿ ಧರ್ಮ ದಂಗಲ್​ ಅವಶ್ಯಕತೆ ಇಲ್ಲ. ಅವಕಾಶ ಕೊಡಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net