

ಮಂಡ್ಯ: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗಿರುವ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಸೂಕ್ತವಾಗಿ ಪರಿಷ್ಕರಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಪ್ರಸ್ತುತ, ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಮಾಸಿಕ ಪಾವತಿಸುತ್ತಿರುವ ಗೌರವ ಸಂಭಾವನೆ ತೀರಾ ಕಡಿಮೆಯಿದ್ದು ಪರಿಷ್ಕರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 34,174 ಅತಿಥಿ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿ 7,808 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಮಾಹೆಯಾನ ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 10,000 ರೂ. ಹಾಗೂ ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ರೂ. 10,500 ರೂ. ಗೌರವ ಸಂಭಾವನೆ ಪಾವತಿಸಲಾಗುತ್ತಿದೆ. ಈ ಮೊತ್ತವನ್ನು ಪರಿಷ್ಕರಿಸುವ ಸಂಬಂಧ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉತ್ತರ ನೀಡಿದ್ದಾರೆ.