

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡಿದರೆ ದಂಗೆ ಏಳಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ತಿಮ್ಮಯ್ಯ ಎಚ್ಚರಿಸಿದರು.
ಸಿದ್ದರಾಮಯ್ಯ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿದ್ದಾರೆ. ಮುಡಾದಲ್ಲಿ ನಿವೇಶನ ಪಡೆಯಲು ಸಿದ್ದರಾಮಯ್ಯ ರಾಜಕೀಯ ಪ್ರಭಾವ ಬೀರಲಿಲ್ಲ. ಶೇ.50:50ರ ಅನುಪಾದಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ನಿವೇಶನಗಳು ಹಂಚಿಕೆಯಾಗಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಸಿದ್ದರಾಮಯ್ಯ ಹಾಗೂ ಪಾರ್ವತಿ ಅವರು ವಿಜಯನಗರದಲ್ಲಿಯೇ ಬದಲಿ ನಿವೇಶ ನೀಡಬೇಕು ಎಂದು ಮುಡಾಗೆ ಮನವಿ ಸಲ್ಲಿಸಲಿಲ್ಲ. ಹೀಗಿದ್ದರೂ ಸಿದ್ದರಾಮಯ್ಯ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿರುವ ಪ್ರಯತ್ನ ಖಂಡನೀಯ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿರುವ ಜನಾಂದೋಲನ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಬೆಂಬಲಿಗರು ಪಾಲ್ಗೊಳ್ಳಲಿದ್ದಾರೆ. ಇದಕ್ಕೆ ಪೂರಕವಾಗಿ ಆದಿಜಾಂಬವ ಸಮುದಾಯದ ಮುಖಂಡರ ಸಭೆ ನಡೆಸಿ, ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ ಎಂದರು.