ರಸ್ತೆ ಅಪಘಾತ ನಿಯಂತ್ರಣಕ್ಕೆ ಕ್ರಮ ಜರುಗಿಸಿ

25Manju7
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ರಸ್ತೆ ಸುರಕ್ಷಾ ಸಮಿತಿ ಸಭೆಯಲ್ಲಿ ಡಿಸಿ ಮೊಹಮ್ಮದ್ ರೋಷನ್ ಮಾತನಾಡಿದರು. ಡಾ.ಭೀಮಾಶಂಕರ ಗುಳೇದ, ಶೃತಿ ಆರೋರಾ, ಎಸ್.ಬಿ.ಸೊಬರದ ಇತರರಿದ್ದರು.
Published on

ಬೆಳಗಾವಿ: ನಗರ, ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಗ್ಗಿಸಲು ಪಂಚಾಯತ ರಾಜ್ ಇಂಜಿನಿಯರಿಂಗ್ ವಿಭಾಗ ಹಾಗೂ ಲೋಕೊಪಯೋಗಿ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುವಂತಹ ಸ್ಥಳಗಳನ್ನು ಗುರುತಿಸಿ ಅಂತಹ ಸ್ಥಳಗಳ ದುರಸ್ತಿ ಮಾಡಬೇಕು ಎಂದು ಸೂಚಿಸಿದರು.

ಕಳೆದ ಮೂರು ವರ್ಷಗಳಲ್ಲಿ ನಡೆದ ಅಪಘಾತಗಳ ಸಂಖ್ಯೆ, ಮೃತರ ಸಂಖ್ಯೆ ಹಾಗೂ ಅಪಘಾತ ಸ್ಥಳಗಳ ಕ್ರೋಢಿಕೃತ ವರದಿ ಸಲ್ಲಿಸಬೇಕು. ಈಗಾಗಲೇ ಗುರುತಿಸಲಾದ ಅಪಘಾತ ಸ್ಥಳಗಳಲ್ಲಿ ನಿಯಂತ್ರಣ ಕ್ರಮ ವಹಿಸಬೇಕು. ಇಲಾಖೆಗಳು ಜಂಟಿ ಸಮಿಕ್ಷೆ ನಡೆಸಿ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ವಿಸ್ತೃತ ವರದಿ ನೀಡಬೇಕು ಎಂದರು.

ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾಗಳು ಸುಸ್ಥಿತಿಯಲ್ಲಿರುವ ಕುರಿತು ಖಾತರಿ ಪಡಿಸಿಕೊಳ್ಳಬೇಕು. ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ವಾಹನಗಳ ವೇಗ ನಿಯಂತ್ರಿಸಲು ವೇಗ ನಿಯಂತ್ರಕ ಅಳವಡಿಸಬೇಕು. ರಸ್ತೆಯಲ್ಲಿನ ಗುಂಡಿಗಳ ದುರಸ್ತಿಗೆ ಕೂಡಲೇ ಕ್ರಮವಹಿಸಬೇಕು. ಸಂಬಂಧಿಸಿದ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ಆಟೋ ರಿಕ್ಷಾಗಳಲ್ಲಿ ಮಿತಿಗಿಂತ ಹೆಚ್ಚು ಶಾಲಾ ಮಕ್ಕಳನ್ನು ಒಯ್ಯುವ ಚಾಲಕರ ಚಾಲನಾ ಪರವಾನಗಿ ರದ್ದುಪಡಿಸಬೇಕು ಎಂದರು.

ಎಸ್‌ಪಿ ಡಾ.ಭೀಮಾಶಂಕರ ಗುಳೇದ ಮಾತನಾಡಿ, ಸಂಚಾರಿ ನಿಯಮ ಉಲ್ಲಂಘಿಸಿ ರದ್ದಾಗಿರುವ ಚಾಲನಾ ಪರವಾನಗಿ ವಿವರವನ್ನು ಒದಗಿಸುವುದರ ಜತೆಗೆ ಅಂತಹ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚುರಪಡಿಸುವಂತೆ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಶೃತಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಬಿ.ಸೊಬರದ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net