

ಪಾಂಡವಪುರ: ಹಲವಾರು ವರ್ಷಗಳಿಂದ ಡಾಂಬರ್ ಕಾಣದೆ ಹದಗೆಟ್ಟಿದ್ದ ಇಲ್ಲಿನ ರೈಲ್ವೆ ನಿಲ್ದಾಣದಿಂದ ಪಾಂಡವಪುರ ಗಡಿ ಭಾಗದ ಅಶೋಕನಗರದವರೆಗಿನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಶನಿವಾರ ಭೂಮಿಪೂಜೆ ನೆರವೇರಿಸಿದರು.
ರೈಲ್ವೆ ನಿಲ್ದಾಣದಿಂದ ಕೆ.ಆರ್.ಪೇಟೆ ಗಡಿ ಭಾಗದವರೆಗಿನ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರ ದುಸ್ತರವಾಗಿತ್ತು. ಈ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ರಸ್ತೆ ಅಭಿವೃದ್ಧಿಗೆ ಸರ್ಕಾರ 5 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಅನುದಾನದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಜತೆಗೆ ಡಾಂಬರ್ ಹಾಕಲಾಗುವುದು. ಕಾಮಗಾರಿಯ ಗುಣಮಟ್ಟ ಕಾಯ್ದುಕೊಂಡು ಶೀಘ್ರ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಪಾಂಡವಪುರದಿಂದ ಮಂಡ್ಯಕ್ಕೆ ತೆರಳುವ ಮುಖ್ಯ ರಸ್ತೆ ಕೂಡ ಹದಗೆಟ್ಟಿದ್ದು, ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಆದಷ್ಟು ಬೇಗ ಹಣ ಬಿಡಗಡೆಯಾಗಲಿದ್ದು, ಪಾಂಡವಪುರದಿಂದ ದೊಡ್ಡಬ್ಯಾಡರಹಳ್ಳಿವರೆಗಿನ ರಸ್ತೆ ಡಾಂಬರೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಈ ರಸ್ತೆ ಕಿರಿದಾಗಿದಾಗಿದ್ದು, ವಾಹನ ಸಂಚಾರ ಕಷ್ಟಕರವಾಗಿದೆ. ಹೀಗಾಗಿ ರಸ್ತೆ ಅಗಲೀಕರಣ ಆಗಬೇಕಿದೆ. ಈ ಬಗ್ಗೆಯೂ ಸರ್ಕಾರದ ಗಮನ ಸೆಳೆದು ಆದಷ್ಟು ಬೇಗ ರಸ್ತೆ ಡಾಂಬರೀಕರಣ ಮಾಡಲಾಗುವುದು ಎಂದು ಹೇಳಿದರು.
ರೈತಸಂಘ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ಕೆನ್ನಾಳು ವಿಜಯಕುಮಾರ್, ಮಾಜಿ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ಎಣ್ಣೆಹೊಳೆಕೊಪ್ಪಲು ಮಂಜು, ಮುಖಂಡರಾದ ವೈ.ಜಿ.ರಘು, ಮಾಖೇಗೌಡ, ಶಿವಣ್ಣ, ಗುತ್ತಿಗೆದಾರ ಅಶೋಕ್ ಇತರರು ಇದ್ದರು.