ರಸ್ತೆ ಅಪಘಾತ ನಿಯಂತ್ರಣಕ್ಕೆ ಕ್ರಮ ಬೇಕು

road accident
Published on

 ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತೆ ಸಮಿತಿ ಸಭೆಯಲ್ಲಿ ಮಾತನಾಡಿದರು. ನೆಲಮಂಗಲ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚು ಅಪಘಾತಗಳಾಗುತ್ತಿವೆ. ವಾರಾಂತ್ಯದಲ್ಲಿ ಟ್ರಾಫಿಕ್ ಸಮಸ್ಯೆ ಸಾಮಾನ್ಯವಾಗಿದೆ. ಆದರೇ ಇದುವರೆಗೆ ಯಾವುದೇ ಕ್ರಮ ಆಗಿಲ್ಲ. ಪದೇ ಪದೇ ಹೆಚ್ಚು ಅಪಘಾತಗಳು ಸಂಭವಿಸುವ ಸ್ಥಳಗಳನ್ನು ಗುರುತಿಸಿ, ಅಪಘಾತ ಸಂಭವಿಸಲು ಕಾರಣ ಏನು ಎಂಬುದನ್ನು ವೈಜ್ಞಾನಿಕವಾಗಿ ತಿಳಿದು ಅದನ್ನು ಪರಿಹರಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ನೆಲಮಂಗಲ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಸಾಮಾನ್ಯವಾಗಿರುವ ಬಗ್ಗೆ ಕಳೆದ ಸಭೆಯಲ್ಲಿಯೂ ಚರ್ಚಿಸಲಾಗಿತ್ತು ಹಾಗೇ ಆ ಬಗ್ಗೆ ಕ್ರಮವಹಿಸುವಂತೆ ಸೂಚನೆ ನೀಡಲಾಗಿತ್ತು. ಆದರೂ ಸಂಬಂಧಪಟ್ಟ ಅಧಿಕಾರಿಗಳು ಆ ಬಗ್ಗೆ ಕ್ರಮವಹಿಸಲಿಲ್ಲವೇಕೆ ಎಂದು ಪ್ರಶ್ನಿಸಿದ ಜಿಲ್ಲಾಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ವೈಜ್ಞಾನಿಕ ಕಾರಣವನ್ನು ವರದಿ ಮಾಡಬೇಕು ಎಂದು ಸೂಚಿಸಿದರು.

ಸೈನ್‌ಬೋರ್ಡ್‌ಗಳನ್ನು ಅಳವಡಿಸಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೈನ್ ಬೊರ್ಡ್‌ಗಳನ್ನು ಅಳವಡಿಸಬೇಕು, ರಸ್ತೆಗಳಲ್ಲಿ ರಸ್ತೆ ಉಬ್ಬುಗಳನ್ನು ಹಾಕಬೇಕು, ಸರ್ವಿಸ್ ರಸ್ತೆಗಳಲ್ಲಿ ಅತಿಕ್ರಮಣವಾಗಿ ಹಾಕಿರುವ ಅಂಗಡಿಗಳನ್ನು ತೆರವುಗೊಳಿಸಬೇಕು. ರಸ್ತೆ ಬದಿಗಳಲ್ಲಿ ವಾಹನ ನಿಲುಗಡೆಯನ್ನು ತಪ್ಪಿಸುವ ಮೂಲಕ ವಾಹನದಟ್ಟಣೆಗೆ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಅನೇಕ ರಸ್ತೆಗಳಲ್ಲಿ ಸೈನ್‌ಬೋರ್ಡ್‌ಗಳೇ ಇಲ್ಲವಾಗಿದೆ, ಇದರಿಂದ ವಾಹನ ಸವಾರರಿಗೆ ಮುಂದಿನ ಪರಿಸ್ಥಿತಿ ಹೇಗೆ ಎಂಬುದು ಅರಿವಿಗೆ ಬರುವುದಿಲ್ಲ ಇವು ಪ್ರಮುಖವಾಗಿ ಅಪಘಾತಗಳಿಗೆ ಅಹ್ವಾನ ನೀಡುತ್ತವೆ ಆದ್ದರಿಂದ ಅಧಿಕಾರಿಗಳು ಅಗತ್ಯವಿರುವ ಕಡೆ ಸ್ಥಳ ಪರಿಶೀಲನೆ ನಡೆಸಿ ಕೂಡಲೇ ಸೈನ್‌ಬೋರ್ಡ್ ಅಳವಡಿಕೆಗೆ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ರಸ್ತೆ ತಿರುವುಗಳಲ್ಲಿ ತಿರುವು ಇದೆ ಎಂಬುದರ ಮಾಹಿತಿ ಇಲ್ಲವಾದರೆ ಅಪಘಾತಕ್ಕೆ ಕಾರಣವಾಗುವ ಸಾಧ್ಯತೆ ಹೆಚ್ಚಿರುತ್ತದೆ, ಒಂದು ವೇಳೆ ರಸ್ತೆ ದುರಸ್ತಿ ಮತ್ತಿತರ ಕೆಲಸ ನಡೆಯುತ್ತಿದ್ದರೆ ಮುಂಚಿತವಾಗಿಯೇ ವಾಹನ ಸವಾರರಿಗೆ ಮಾಹಿತಿ ತಲುಪಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಬ್ಲಾಕ್ ಸ್ಪಾಟ್‌ಗಳ ಪಟ್ಟಿ: ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತವೆ. ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಅಪಘಾತಗಳು ಸಂಭವಿಸುವ ಬ್ಲಾಕ್ ಸ್ಪಾಟ್‌ಗಳ ಪಟ್ಟಿಯನ್ನು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ನೀಡಲಾಗುವುದು. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಆ ಸ್ಥಳದಲ್ಲಿನ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಕೆ.ಬಾಬಾ ಸಭೆಗೆ ಮಾಹಿತಿ ನೀಡಿದರು. ಹೆದ್ದಾರಿಗಳಲ್ಲಿ ಅಪಘಾತವಲಯಗಳ ಪಟ್ಟಿ ಜತೆಗೆ ಸೈನ್‌ಬೋರ್ಡ್ ಅಳವಡಿಸುವ ಬಗ್ಗೆ ಹೆದ್ದಾರಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net