

ರೋಣ: ಪಟ್ಟಣದಲ್ಲಿ ಜೂ. 21ರಂದು ನಡೆಯಲಿರುವ ಜನಸ್ಪಂದನ ಕಾರ್ಯಕ್ರಮಕ್ಕೆ ತಾಲೂಕು ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸೇರಿ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ತಹಸೀಲ್ದಾರ್ ನಾಗರಾಜ ಕೆ. ತಿಳಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಗುರು ಭವನದಲ್ಲಿ ಜೂ. 21ರಂದು ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ ಹಾಗೂ ಶಾಸಕ ಜಿ.ಎಸ್. ಪಾಟೀಲ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ. ಗ್ರಾಪಂ ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲಿ ಜನಸ್ಪಂದನ ಕಾರ್ಯಕ್ರಮದ ಕುರಿತು ವಾಹನದ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಆಯಾ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸಾರ್ವಜನಿಕ ಸಮಸ್ಯೆಗಳ ಕುರಿತು ಕ್ರಮ ಕೈಗೊಳ್ಳಬೇಕು. ಜನರ ಸಮಸ್ಯೆ ಬಗೆಹರಿಸುವಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಂತಹ ಪ್ರತಿಯೊಬ್ಬ ಸಾರ್ವಜನಿಕರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಸಸಿಗಳನ್ನು ಕೊಡಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸಬೇಕು ಎಂದರು.
ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ಸಿ.ಆರ್. ಮಹಾದೇವಪ್ಪ, ಕೃಷಿ ಅಧಿಕಾರಿ ರವೀಂದ್ರಗೌಡ ಪಾಟೀಲ,ಪುರಸಭೆ ಮುಖ್ಯಾಧಿಕಾರಿ ರಮೇಶ ಗೊಂದ್ಕರ, ಶಿವಯೋಗಪ್ಪ ರಿತ್ತಿ, ಬಸವರಾಜ ಅಂಗಡಿ, ಬಲವಂತಪ್ಪ ನಾಯಕ, ಜಿ.ಟಿ. ಕೊಪ್ಪದ, ಗೀತಾ ಆಲೂರು, ಪಶು ಇಲಾಖೆ ನೌಕರ ಬಿ.ಎಸ್. ಕುರಹಟ್ಟಿ, ಸುವರ್ಣಾ ಜುಮ್ಮನಕಟ್ಟಿ, ವಿರೂಪಾಕ್ಷಯ್ಯ ಹಿರೇಮಠ, ಕೆ.ಎ. ಕನೋಜ, ಗಿರೀಶ ಹೊಸುರು ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.