ಸೂರು ಕಟ್ಟಿಕೊಳ್ಳಲು ಒಂದು ನಿವೇಶನ ಕೊಡಿ

JLR ph 2 July 16 Manavi
Published on

ಜಗಳೂರು: ನಿವೇಶನ, ವಸತಿ, ಚರಂಡಿ ನಿರ್ಮಾಣ, ಕೂಲಿ ಕೆಲಸ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಭಾನುವಾರ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ತಾಲೂಕಿನಲ್ಲಿ 170ಕ್ಕೂ ಹೆಚ್ಚು ಹಳ್ಳಿಗಳಿವೆ. ಪ್ರತಿ ಹಳ್ಳಿಗಳಲ್ಲೂ ಒಂದಿಲ್ಲೊಂದು ಸಮಸ್ಯೆ ತಾಂಡವವಾಡುತ್ತಿವೆ. ಆದರೆ, ಅಧಿಕಾರಿಗಳು ಮಾತ್ರ ಸೂಕ್ತ ಪರಿಹಾರ ನೀಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆಪಾದಿಸಿದರು.

ಗ್ರಾ.ಕೂ.ಸ. ಕಾರ್ಯಕರ್ತೆ ಪಿ.ಎಸ್. ಸುಧಾ ಮಾತನಾಡಿ, ನರೇಗಾ ಯೋಜನೆಯಡಿ ಪ್ರತಿ ಗ್ರಾಮದಲ್ಲೂ 100ರಿಂದ 1 ಸಾವಿರದವರೆಗೂ ಕೂಲಿಕಾರರಿದ್ದಾರೆ. ಆದರೆ, ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳು ಸಾಕಷ್ಟು ಜನರಿಗೆ ತಲುಪದೆ ಮಧ್ಯವರ್ತಿಗಳ ಹಾವಳಿಯಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.

ಬಿಳಿಚೋಡು ಗ್ರಾಮದ ಸ.ನಂ 34 ಸೇಂದಿ ವನವೆಂದು ಗುರುತಿಸಲಾಗಿದೆ. 60ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನವಿಲ್ಲ. ಹಾಗಾಗಿ, ಅಲ್ಲಲ್ಲಿ ಗುಡಿಸಲು ಹಾಕಿಕೊಂಡು ಬದುಕುತ್ತಿದ್ದಾರೆ. ಅಂತಹ ಕುಟುಂಬಗಳಿಗೆ ಹಕ್ಕುಪತ್ರ ನೀಡಿ ಶಾಶ್ವತವಾಗಿ ಸೂರು ಕಲ್ಪಿಸಿಕೊಡಬೇಕಾಗಿದೆ ಎಂದರು.

ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಮನವಿ ಸ್ವೀಕರಿಸಿ ಮಾತನಾಡಿ, ಗ್ರಾಮೀಣ ಪ್ರದೇಶಗಳ ಸಮಸ್ಯೆಗಳ ಬಗ್ಗೆ ನನಗೆ ಅರಿವಿದೆ. ತುಂಬ ಸಮಸ್ಯೆಗಳಿರುವ ಗ್ರಾಮಗಳಿಗೆ ಮೊದಲ ಆದ್ಯತೆ ನೀಡಿ ಸಾರಿಗೆ, ರಸ್ತೆ, ನಿವೇಶನ, ವಸತಿ ಸೌಲಭ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net