

ಕೊಳ್ಳೇಗಾಲ: ಬಲವಂತವಾಗಿ ಗೂಂಡಾಗಿರಿ ಮಾಡಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಗೆಲ್ಲಲು ಕಾಂಗ್ರೆಸ್ ಹವಣಿಸುತ್ತಿದೆ ಎಂದು ಬಿ.ವೈ. ವಿಜಯೇಂದ್ರ ಆರೋಪಿಸಿದರು.
ಪಟ್ಟಣದ ರೋಟರಿ ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆ ವಿಚಾರ ಪ್ರಸ್ತಾಪಿಸಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ. ಗೂಂಡಾಗಿರಿ ಮಾಡಿ ಲೋಕಸಭಾ ಚುನಾವಣೆ ಗೆಲ್ಲಬೇಕೆಂದು ಹವಣಿಸುತ್ತಿದ್ದಾರೆ. ಆದರೆ, ಮತದಾರರು ಬದಲಾವಣೆ ಬಯಸುತ್ತಿದ್ದಾರೆ. ಸಜ್ಜನ ವ್ಯಕ್ತಿತ್ವದ ಡಾ.ಮಂಜುನಾಥ್ ಅವರನ್ನು ಬೆಂಬಲಿಸುತ್ತಿದ್ದಾರೆ. ಇದರಿಂದ ಹತಾಶೆಗೊಂಡು ಗೂಂಡಾ ವರ್ತನೆ ತೋರುತ್ತಿದ್ದಾರೆ. ಇದಕ್ಕೆ ಜನರೇ ಉತ್ತರ ನೀಡುತ್ತಾರೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 10 ತಿಂಗಳಾಗಿದೆ. ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಕೈ ಬಿಟ್ಟಿದ್ದಾರೆ. ಎಸ್‌ಇಪಿ ಹಾಗೂ ಟಿಎಸ್‌ಪಿ ಯೋಜನೆಯ 24 ಸಾವಿರ ಕೋಟಿ ರೂ. ಅನುದಾನವನ್ನು ಗ್ಯಾರಂಟಿಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋವನ್ನು ಪ್ರಚಾರಕ್ಕೆ ಬಳಸದೆ ಇನ್ಯಾರದ್ದು ಬಳಸಬೇಕು? ಯಾರ ಫೋಟೋ ಹಾಕಬೇಕು, ಯಾರದು ಹಾಕ ಬಾರದೆಂದು ನಾವೇ ತೀರ್ಮಾನ ಮಾಡುತ್ತೇವೆ. ಈ ಬಗ್ಗೆ ಯಾರ ಬಳಿ ಪಾಠ ಕೇಳೋ ಅಗತ್ಯವಿಲ್ಲ ಎಂದು ಬಿ.ವೈ.ವಿಜಯೇಂದ್ರ ಅವರು ಮಾಜಿ ಸಚಿವ ಈಶ್ವರಪ್ಪ ಅವರ ಹೇಳಿಕೆಗೆ ತಿರುಗೇಟು ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರ ಹೃದಯದಲ್ಲಿ ಮನೆ ಮಾಡಿದ್ದಾರೆ. ಅದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಅವರ ಫೋಟೋ ಬಳಸಿಕೊಳ್ಳುವುದು ಸಹಜ. ಸಂಸದ ರಾಘವೇಂದ್ರ ಶಿವಮೊಗ್ಗದಲ್ಲಿ 2 ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲ್ಲುತ್ತಾರೆ ಎಂದರು.
ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ನಮಗೆ ಬೆಂಬಲ ನೀಡಲಿದ್ದಾರೆ. ಅವರ ಅಳಿಯ ಮಾಜಿ ಶಾಸಕ ಹರ್ಷವರ್ಧನ್ ನಮ್ಮ ಜತೆಗಿದ್ದಾರೆ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುವುದನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆಶಿವಕುಮಾರ್ ಅವರಿಂದ ತಡೆಯಲು ಸಾಧ್ಯವಿಲ್ಲ ಎಂದರು.
ಇದು ದೇಶದ ಭವಿಷ್ಯವನ್ನು ರೂಪಿಸುವ ಚುನಾವಣೆಯಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮೋದಿ ಅವರ ದೂರದೃಷ್ಟಿ ಒಪ್ಪಿಕೊಂಡು ಬೆಂಬಲ ನೀಡಿದ್ದಾರೆ. ದೇಶದ ಹಿತದೃಷ್ಟಿಯಿಂದ ಈ ಮೈತ್ರಿಯಾಗಿದೆ. ಇದರಲ್ಲಿ ಯಾವುದೇ ಸ್ವಾರ್ಥವಿಲ್ಲ ಎಂದರು.
ರೋಡ್ ಶೋ
ಕೊಳ್ಳೇಗಾಲದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರೋಡ್ ಶೋ ನಡೆಸಿ ಮಾತಯಾಚನೆ ಮಾಡಿದರು. ಪಟ್ಟಣದ ಅಚ್ಗಾಳ್ ಯಾತ್ರಿ ನಿವಾಸ್‌ನಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ಬಿಸಿಲಲ್ಲೂ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಹನೂರು ಶಾಸಕ ಆರ್.ಮಂಜುನಾಥ್, ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್, ಉಪಾಧ್ಯಕ್ಷ ಎಸ್.ದತ್ತೇಶ್‌ಕುಮಾರ್ ಇತರರು ಇದ್ದರು.