ತಲೆ ಮರೆಸಿಕೊಂಡಿದ್ದ ರೌಡಿ ಕಡಲೆ ಪರಿಷೆಗೆ ಬಂದು ಸಿಕ್ಕಿ ಹಾಕಿಕೊಂಡ!

kadle parishe
Published on

ಬೆಂಗಳೂರು: ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಯನ್ನು ಕಡಲೆಕಾಯಿ ಪರಿಷೆಗೆ ಬಂದಿದ್ದ ವೇಳೆ ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿ ನಿವಾಸಿ ಪ್ರತ್ವಿಕ್(೨೧) ಬಂಧಿತ ರೌಡಿ.

೨೦೧೯ರ ನವೆಂಬರ್ ೧೯ರಂದು ಬಸವನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳಾದ ಅಭಿಷೇಕ್ ಮತ್ತು ಪ್ರತ್ವಿಕ್ ಸೇರಿಕೊಂಡು ಅಭಿಷೇಕ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಳಿಕ ತನಿಖೆ ನಡೆಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಲಾಗಿತ್ತು.

ಜಾಮೀನು ಪಡೆದು ಹೊರ ಬಂದಿದ್ದ ಆರೋಪಿ ಪ್ರತ್ವಿಕ್, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ನಾಲ್ಕು ಬಾರಿ ಜಾಮೀನು ರಹಿತ ವಾರೆಂಟ್ ಹೊರಡಿಸಿದ್ದರೂ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಆರೋಪಿಯ ಬಂಧನಕ್ಕೆ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡವು ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಆರೋಪಿಯು ಪ್ರತಿ ವರ್ಷ ಬಸವನಗುಡಿ ಕಡಲೆಕಾಯಿ ಪರಿಷೆಗೆ ತಪ್ಪದೇ ಬರುತ್ತಾನೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಮಾಹಿತಿಯ ಹಿನ್ನೆಲೆಯಲ್ಲಿ ಆರೋಪಿಗಾಗಿ ಕಾದು ಕುಳಿತ್ತಿದ್ದ ಪೊಲೀಸರ ತಂಡ ಮಂಗಳವಾರ ಈತನನ್ನು ಬಂಧಿಸಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿದ್ದಾಗ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ವಿಭಾಗದ ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net