

ವಿಜಯಪುರ: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಕ್ವಿಂಟಾಲ್‌ಗೆ ಹೆಚ್ಚುವರಿ 450 ರೂ. ನೀಡಲು ನಿರ್ಧರಿಸಿದ್ದು, ಅದಕ್ಕಾಗಿ 140 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಘೋಷಿಸಿದರು.
ಇಲ್ಲಿನ ನೂತನ ಪ್ರವಾಸಿ ಮಂದಿರದಲ್ಲಿ ಸೋಮವಾರ ಕಬ್ಬು ಬೆಳೆಗಾರರು, ತೊಗರಿ ಬೆಳೆಗಾರರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
ಕೇಂದ್ರ ಸರ್ಕಾರದ ಬೆಂಬಲ ಬೆಲೆಗೆ ಹೆಚ್ಚುವರಿಯಾಗಿ 450 ರೂಪಾಯಿ ಸೇರಿಸಿ ಪ್ರತಿ ಕ್ರಿಂಟಾಲ್‌ಗೆ ಒಟ್ಟು 8 ಸಾವಿರ ರೂ. ಬೆಂಬಲ ಬೆಲೆ ನೀಡಲಾಗುವುದು. ಕೇಂದ್ರ ಸರ್ಕಾರದ ನಫೆಡ್ ಖರೀದಿ ಏಜನ್ಸಿಯಾಗಿದ್ದು, ದಾಖಲೆಗಳನ್ನು ಸಕಾಲಕ್ಕೆ ಒದಗಿಸದ ಕಾರಣ ಖರೀದಿ ಪ್ರಕ್ರಿಯೆ ವಿಳಂಬವಾಗಿದೆ. ರಾಜ್ಯಾದ್ಯಂತ 400ಕ್ಕೂ ಅಧಿಕ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ತೊಗರಿ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಇದೇ ಮೊದಲ ಬಾರಿಗೆ 8000 ರೂ. ಧಾರಣಿಯಲ್ಲಿ ತೊಗರಿ ಖರೀದಿ ಮಾಡಲಾಗುತ್ತಿದೆ. ಇದುವರೆಗೆ 5800 ರೂ. ಧಾರಣಿಯಲ್ಲಿ ಖರೀದಿ ಮಾಡಲಾಗುತ್ತಿತ್ತು. ಬೀದರ್ ಜಿಲ್ಲೆಯಿಂದ ಚಿತ್ರದುರ್ಗ ಜಿಲ್ಲೆಯವರೆಗೆ ತೊಗರಿ ಬೆಳೆಯಲಾಗುತ್ತಿದ್ದು, ರೈತರು ಬೆಂಬಲ ಬೆಲೆ ಹೆಚ್ಚಳ ಮಾಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ರೈತರ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿ ಕ್ವಿಂಟಾಲ್‌ಗೆ 450 ರೂ. ಹೆಚ್ಚುವರಿ ಕೊಡುವ ನಿರ್ಧಾರ ಕೈಗೊಂಡಿದೆ ಎಂದು ವಿವರಿಸಿದರು.
ಆಂಧ್ರಪ್ರದೇಶದ ಹೈಬ್ರಿಡ್ ಜೋಳವನ್ನು ರಾಜ್ಯದ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿರುವುದು ಗಮನಕ್ಕೆ ಬಂದಿದ್ದು, ಆಂದ್ರದ ಜೋಳಕ್ಕೆ ಕಡಿವಾಣ ಹಾಕಲಾಗುವುದು ಎಂದ ಸಚಿವರು, ಹೈಬ್ರಿಡ್ ಜೋಳಕ್ಕೆ 3370 ರೂ. ಹಾಗೂ ಮಾಲ್ದಂಡಿ ಜೋಳಕ್ಕೆ 3400 ರೂ. ಬೆಂಬಲ ಬೆಲೆ ಘೋಷಣೆ ಮಾಡಲಾಗಿದ್ದು, ಒಟ್ಟು ಐದು ಲಕ್ಷ ಕ್ವಿಂಟಾಲ್ ಖರೀದಿ ಮಾಡಲಾಗುವುದು. ಇದುವರೆಗೆ ಕೆಲವೇ ಕೆಲವು ಜಿಲ್ಲೆಗಳ ರೈತರು ಮಾತ್ರ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುತ್ತಿದ್ದರು. ಈ ಬಾರಿ ಜೋಳ ಬೆಳೆಯುವ ಎಲ್ಲ ಜಿಲ್ಲೆಗಳಿಗೂ ಖರೀದಿ ಪ್ರಮಾಣವನ್ನು ಹಂಚಿಕೆ ಮಾಡಲಾಗುವುದು ಎಂದು ವಿವರಿಸಿದರು.
ತೊಗರಿ ಬೆಳೆಗಾರರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸಿಎಂ ಜೊತೆ ಚರ್ಚಿಸಲಾಗುವುದು. ಅಲ್ಲದೇ, ಕಳಪೆ ಬಿತ್ತನೆ ಬೀಜ ಪೂರೈಸಿದ ಏಜೆನ್ಸಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.