

ಗದಗ: ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಶೇಂಗಾ ಖರೀದಿಸಲು ಪ್ರತಿ ಕ್ವಿಂ.ಗೆ 6,783 ರೂ. ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ಆದೇಶನುಸಾರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಮತ್ತು ಖರೀದಿ ಅವಧಿಯನ್ನು 90 ದಿನಗಳವರೆಗೆ ಪ್ರಕ್ರಿಯೆ ಪ್ರಾರಂಭಿಸತಕ್ಕದ್ದು. ಜಿಲ್ಲೆಯಲ್ಲಿ ತೆರೆಯಲಾಗುವ ಶೇಂಗಾ ಖರೀದಿ ಕೇಂದ್ರಗಳಲ್ಲಿ ಎಫ್‌ಎಕ್ಯೂ ಗುಣಮಟ್ಟ ಪರಿಶೀಲನೆಗೆ ಗ್ರೇಡರ್‌ಗಳನ್ನು ನೇಮಕ ಮಾಡಬೇಕು ಮತ್ತು ಅವರಿಗೆ ತರಬೇತಿ ನೀಡಬೇಕು.
ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 3 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಶೇಂಗಾ ಖರೀದಿಸಬೇಕು. ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ ಕುರಿತು ರೈತರಿಗೆ ತಿಳಿವಳಿಕೆ ನೀಡಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ ಸುಧಾ ಆರ್. ಬಂಡಿ ಮಾತನಾಡಿ, ಎಫ್‌ಎಕ್ಯೂ ಗುಣಮಟ್ಟದ ಶೇಂಗಾ ಪ್ರತಿ ಕ್ವಿಂಟಾಲ್‌ಗೆ 6,783 ರೂ. ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದನ್ವಯ ನ್ಯಾಪೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ ಮತ್ತು ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ ಅವರನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲೆಯ 10 ಕಡೆ ಖರೀದಿ ಕೇಂದ್ರ ತೆರೆಯಲು ತೀರ್ಮಾನಿಸಲಾಯಿತು. ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತೋಟಗಾರಿಕೆ ಇಲಾಖೆ, ಸಹಕಾರಿ ಸಂಘಗಳ ಉಪನಿಬಂಧಕರು, ಕೆಒಎಫ್ ವ್ಯವಸ್ಥಾಪಕರು ಹಾಜರಿದ್ದರು.