

ಕೊಳ್ಳೇಗಾಲ: ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡಲು ಗ್ರಾಮೀಣ ಕ್ರೀಡಾಕೂಟ ಸಹಕಾರಿಯಾಗಿದೆ ಎಂದು ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ಸುರೇಶ್ ತಿಳಿಸಿದರು.
ಪಟ್ಟಣದ ಶ್ರೀ ಮಹದೇಶ್ವರ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಪ್ರತಿ ವರ್ಷವೂ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಲಿದೆ. ಅಂತೆಯೇ, ಇಂದು 16ರಿಂದ 30 ವರ್ಷದ ವಯೋಮಾನದವರಿಗೆ ವಾಲಿಬಾಲ್, ಹಗ್ಗಜಗ್ಗಾಟ, ಕಬಡ್ಡಿ, ಖೋಖೋ ಕ್ರೀಡೆಗಳನ್ನು ಆಯೋಜಿಸಲಾಗಿದೆ ಎಂದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸ್ಟೀವನ್ ಮಾತನಾಡಿ, 2024-25ನೇ ಸಾಲಿನ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಮಕ್ಕಳು ಬಹಳ ಉತ್ಸಾಹದಿಂದ ಭಾಗವಹಿಸಿದ್ದಾರೆ. ಪಟ್ಟಣದಲ್ಲಿ ಓದುವ ಮಕ್ಕಳು, ಯುವಕರಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಆದರೆ, ಗ್ರಾಮೀಣ ಭಾಗದ ಮಕ್ಕಳು ಇಂತಹ ಅವಕಾಶದಿಂದ ವಂಚಿತರಾಗಬಾರದೆಂದು ಕ್ರೀಡಾಕೂಟವನ್ನು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ನಡೆಸುತ್ತಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಹಲವು ತಂಡಗಳು ಲವಲವಿಕೆ ಯಿಂದ ಸ್ಪರ್ಧೆಯಲ್ಲಿ ಭಾಗವಹಿಸಿದೆ ಎಂದರು.
ಇದಕ್ಕೂ ಮುನ್ನ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ತಾಯಿ ಗೌರಮ್ಮ ರಾಚಯ್ಯ ಅವರ ನಿಧನಕ್ಕೆ ಅಧಿಕಾರಿಗಳು ಹಾಗೂ ಮಕ್ಕಳು ಸಂತಾಪ ಸೂಚಿಸಿದರು. ಕ್ರೀಡಾ ಇಲಾಖೆಯ ಮಧುತೇಜಸ್, ದೊರೆಸ್ವಾಮಿ, ಯಮುನಾ, ಮಂಜುನಾಥ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಮತ್ತಿತರಿದ್ದರು.