

ರೈತ ಮುಖಂಡರ ಸಭೆ ತೀರ್ಮಾನ
ವಿಜಯವಾಣಿ ಸುದ್ದಿಜಾಲ ಹನೂರು
ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಆ.14 ರಂದು ಜಿಲ್ಲಾಡಳಿತ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘ ಹಾಗೂ ಹಸಿರು ಸೇನೆ (ಸಾಮೂಹಿಕ ನಾಯಕತ್ವ) ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ರೈತ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಂಡ ನಂತರ ಮಾತನಾಡಿದರು.
ತಾಲೂಕಿನ ಚಂಗಡಿ ಗ್ರಾಮವನ್ನು ಸ್ಥಳಾಂತರಿಸಿ ಪುನರ್ವಸತಿ ಕಲ್ಪಿಸುವುದಾಗಿ ಸರ್ಕಾರ ಭರವಸೆ ನೀಡಿ ಮೂರುವರೆ ವರ್ಷವೇ ಕಳೆದಿದೆ. ಆದರೆ ಈ ಕಾರ್ಯವಾಗಿಲ್ಲ. ಜಿಲ್ಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ವಾಸಿಸುವ ಗ್ರಾಮಗಳಿಗೆ ಅಗತ್ಯ ಮೂಲ ಸೌಕರ್ಯವಿಲ್ಲ. ಇದರಿಂದ ಜನರು ಕಷ್ಟದ ನಡುವೆ ಜೀವನ ನಡೆಸುತ್ತಿದ್ದಾರೆ. ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಕಡಿವಾಣ ಹಾಕಲು ಅರಣ್ಯ ಇಲಾಖೆ ಕ್ರಮವಹಿಸಿಲ್ಲ. ಕಾಡು ಪ್ರಾಣಿಗಳಿಂದಾಗುವ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುತ್ತಿಲ್ಲ. ಹನೂರು ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವಾಗಿಲ್ಲ. ಇದರಿಂದ ರೈತರು ಕೃಷಿಯಲ್ಲಿ ತುಂಬಾ ತೊಂದರೆ ಅನುಭವಿಸುವಂತಾಗಿದೆ ಎಂದು ಅವರು ದೂರಿದರು.
ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಎಲ್ಲಾ ಸಮಸ್ಯೆಯನ್ನು ಬಗೆಹರಿಸಬೇಕಿದೆ. ಕಬಿನಿ 2ನೇ ಹಂತದ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು. ತಮಿಳುನಾಡಿಗೆ ಹೊಂದಿಕೊಂಡಂತಿರುವ ಗ್ರಾಮಗಳಲ್ಲಿ ಅರಣ್ಯ ಇಲಾಖೆ ತಮಿಳುನಾಡಿನ ದನಗಳ ಸರ್ವೇ ಕಾರ್ಯ ನಡೆಸಿ ಅಗತ್ಯ ಕ್ರಮವಹಿಸಬೇಕು. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಿಬೇಕು ಎಂದು ಹೊನ್ನೂರು ಪ್ರಕಾಶ್ ಹೇಳಿದರು.
ಸಂಘದ ತಾಲೂಕು ಅಧ್ಯಕ್ಷ ಚಂಗಡಿ ಕರಿಯಪ್ಪ, ಪದಾಧಿಕಾರಿಗಳಾದ ಅಂಬಳೆ ಶಿವಕುಮಾರ್, ಮಹದೇವಸ್ವಾಮಿ, ಮಹೇಶ್, ಷಣ್ಮುಗಸ್ವಾಮಿ, ವಿನೇಶ್, ಮಾದಪ್ಪ, ಬಸವಣ್ಣ, ನಂದೀಶ್, ಶ್ರೀನಿವಾಸ್, ಮೈಕೇಲ್ ಹಾಗೂ ಇನ್ನಿತರರು ಇದ್ದರು.