'ಬಿಜೆಪಿ ಬರಲು ಯಾರು ಕಾರಣ ಮಿಸ್ಟರ್ ಸಿದ್ಧ ಸೂತ್ರಧಾರರೆ? ಕುಣಿಕೆ ಬಿಗಿಯಲು ಯತ್ನಿಸಿದವರು ಯಾರು ಮಿಸ್ಟರ್‌ ಟರ್ಮಿನೇಟರ್?‌'

HDK
Published on

ಬೆಂಗಳೂರು: ಕಾಂಗ್ರೆಸ್ ವಿರುದ್ಧ ನಿರಂತರ ವಾಗ್ದಾಳಿ ಮುಂದುವರಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾಲೆಳೆದಿದ್ದಾರೆ.

ಮೈತ್ರಿ ಸರ್ಕಾರ ರಚನೆಯ ಇತಿಹಾಸ ಕೆದಕಿ, ಕಿಚಾಯಿಸಿದ್ದಾರೆ. ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ ಎಂದು ಟೀಕಿಸಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಹೇಳಿ ನಮ್ಮ ಮನೆ ಬಾಗಿಲಿಗೆ ಬಂದ ಕಾಂಗ್ರೆಸ್‌ ನಾಯಕರು ಸರಕಾರದ ನೇತೃತ್ವ ವಹಿಸಿ ಎಂದರು. ಹಾಗಾದರೆ, ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧ ಇಲ್ಲವಾ ಮಿಸ್ಟರ್ ಸಿದ್ದಸೂತ್ರಧಾರರೆ? ಎಂದು ಕೆಣಕಿದ್ದಾರೆ.

ನಾನು ಜೆಡಿಎಸ್‌ʼನವರ ಮನೆ ಬಾಗಿಲಿಗೆ ಹೋಗಿಲ್ಲ ಎನ್ನುತ್ತೀರಿ, ನಿಮ್ಮನ್ನು ಕರೆದವರು ಯಾರು? ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು? ದೆಹಲಿ ನಾಯಕರು ನಮ್ಮ ಮನೆ ಬಾಗಿಲಲ್ಲಿ ನಿಂತಿದ್ದಾಗಲೇ ಮೈತ್ರಿಗೆ ಕುಣಿಕೆ ಬಿಗಿಯಲು ಯತ್ನಿಸಿದವರು ಯಾರು ಮಿಸ್ಟರ್‌ ಟರ್ಮಿನೇಟರ್?‌ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಸೋನಿಯಾ ಮಾತಿಗೆ ಕಿಮ್ಮತ್ತಿಲ್ಲವೆ?:

ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆದಿದೆ, ನನ್ನ ಹಂತದಲ್ಲಿ ಅಲ್ಲ ಅನ್ನುತ್ತೀರಿ! ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರ ಮಾತಿಗೇ ನಿಮ್ಮಲ್ಲಿ ಕಿಮ್ಮತ್ತಿಲ್ಲಾ? ಹಾಗಾದರೆ, ಸಿಎಲ್‌ಪಿಯನ್ನೇ ಅಡ್ಡಡ್ಡ ʼಸೀಳಿʼ ಬೆಂಬಲಿಗ ಶಾಸಕರು ಬಿಜೆಪಿಗೆ ಹೋಗಲು ದುಷ್ಪ್ರೇರಣೆ ಕೊಟ್ಟವರು ಯಾರು? ಎಂದು ಕೇಳಿದ್ದಾರೆ.

ವರಿಷ್ಠರು ತಂದ ಸರಕಾರವನ್ನೇ ತೆಗೆದಿರಿ, ಬಿಜೆಪಿ ಸರಕಾರ ಬರಲು ಕಾರಣರಾದಿರಿ. ಈಗ ಸುಳ್ಳಿಗೆ ಸುಳ್ಳು ಪೋಣಿಸುತ್ತಿದ್ದೀರಿ. ಬಿಜೆಪಿ ಸರಕಾರ ಬರಲು ಶಾಸಕರ ಟೀಂ ರೆಡಿ ಮಾಡಿದವರು ಯಾರು? ಇಷ್ಟೆಲ್ಲಾ ʼಸಿದ್ದಕಲೆʼ ಎಲ್ಲಿಂದ ಬಂತು ಮಿಸ್ಟರ್ ಸಿದ್ದಕಲಾನಿಪುಣಪ್ಪಾ!? ಕುಟುಕಿದ್ದಾರೆ.

ಖರ್ಗೆಗೆ ಖೆಡ್ಡಾ, ಪರಮೇಶ್ವರರಿಗೆ ಸೋಲು:

ಹೈಕಮಾಂಡ್ ನಿರ್ಧಾರಕ್ಕೂ ಗುನ್ನ, ಅಹಿಂದದ ಹೆಸರಿನಲ್ಲಿ ದಲಿತ ನಾಯಕರಾದ ಖರ್ಗೆ ಅವರಿಗೂ ಖೆಡ್ಡಾ, ಡಾ,ಪರಮೇಶ್ವರ ಅವರಿಗೆ ಸೋಲಿನ ಸುಳಿ, ಈಗ ನೋಡಿದರೆ; ʼಬಂಡೆʼಯ ಕೆಳಗೂ ಡೈನಾಮೈಟ್ ಇಡುತ್ತಿರುವ ಅನೈತಿಕ, ನೀಚ, ನಿಕೃಷ್ಟ, ಹೀನ ರಾಜಕಾರಣಕ್ಕೆ ನಾಂದಿ ಹಾಡಿರುವ ʼಪರಮಪಾತಕ ಪರಾಕಾಷ್ಠೆ ಯಾರು? ಎಂದು ಕೇಳಿದ್ದಾರೆ.

ಬ್ರೂಟಸ್ ಯಾರು?

ಜೆಡಿಎಸ್‌ ಬಿಜೆಪಿಯ ಬಿ ಟೀಂ ಅನ್ನುತ್ತೀರಿ. ಹಾಗಾದರೆ; ಆಡಳಿತ ಪಕ್ಷದಲ್ಲೇ ಕೂತು ವಿರೋಧಿಗಳೊಂದಿಗೆ ಕುಮ್ಮಕ್ಕಾಗಿ ಬೆನ್ನಿಗಿರಿದ ʼಬ್ರೂಟಸ್‌ʼ ಯಾರು? ಮೈತ್ರಿ ಸರಕಾರಕ್ಕೆ ಮೊದಲ ದಿನದಿಂದಲೇ ಮಹೂರ್ತ ಇಟ್ಟವರು ಯಾರು? ಸ್ವಯಂಘೋಷಿತ ಅಹಿಂದ ನಾಯಕರೇ ನಿಮ್ಮೊಳಗಿದೆ ಕಾರ್ಕೋಟಕ ʼವಿಷʼ. ಆ ವಿಷವೇ ನಿಮಗೆ ಮುಳುವು ಎಂದು ಎಚ್ಚರಿಸಿದ್ದಾರೆ.

ಅಹಾ! ಕೋಲಾರದಲ್ಲಿ ಕಲರ್‌ಫುಲ್‌ ಸುಳ್ಳುಗಳ ಸರಮಾಲೆಯನ್ನೇ ಸೃಷ್ಟಿಸಿ ಕೃತಾರ್ಥರಾಗಿದ್ದೀರಿ. ಅಡ್ಜಸ್ಟ್‌ಮೆಂಟ್‌ ರಾಜಕಾರಣʼದ ಹರಿಕಾರರು ನೀವಲ್ಲವೇ? ವಿನಾಶಕಾಲೇ ವಿಪರೀತ ಸುಳ್ಳು! ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net