ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಏಕೆ? ಶಿಕ್ಷಕರ ವಿಷಯದಲ್ಲಿ ಸರ್ಕಾರಕ್ಕೆ ಎಚ್​ಡಿಕೆ​ ತರಾಟೆ

HDK
HDK
Published on

ಬೆಂಗಳೂರು: ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ಶಿಕ್ಷಕರ ವಿಷಯದಲ್ಲಿ ವರ್ತಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ. ಸರಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ವರ್ಷದ ಅಕ್ಟೋಬರ್‌ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಕರೊನ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ ಎಂದು ಪ್ರಶ್ನಿಸಿದ್ದಾರೆ.

ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ, ಶಾಪಕ್ಕೆ ಗುರಿಯಾಗುತ್ತಿದೆ. 'ಹರ ಮುನಿದರೂ ಗುರು ಕಾಯ್ವನು' ಎಂಬುದನ್ನು ಸರಕಾರ ಮರೆಯಬಾರದು.

ರಾಜ್ಯ ಸರ್ಕಾರ ಅಕ್ಟೋಬರ್ 1ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net