

ಕಲಬುರಗಿ: ಸೊನ್ನ ಬ್ಯಾರೇಜ್ನಿಂದ ಭೀಮಾ ನದಿಗೆ ನೀರು ಬಿಟ್ಟ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಘತ್ತರಗಿ ಬಳಿಯ ಸೇತುವೆ ಮುಳುಗಡೆಯಾಗಿದೆ.
ಭೀಮಾ ನದಿ ಉಕ್ಕಿ ಹರಿಯುತ್ತಿದ್ದು, ಅಫಜಲಪುರ- ಜೇವರ್ಗಿ, ಸಿಂಧಗಿ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ಎರಡು ಅಡಿಯಷ್ಟು ನೀರು ಹರಿಯುತ್ತಿದೆ. ಅಫಜಲಪುರ ತಾಲೂಕಿನ ದೇವಲ ಗಾಣಗಾಪುರ ಬಳಿಯ ಸೇತುವೆ ಕೂಡ ಜಲಾವೃತಗೊಂಡಿದೆ.
ಈ ಹಿನ್ನೆಲೆಯಲ್ಲಿ, ದೇವಲ ಗಾಣಗಾಪುರ- ಜೇವರ್ಗಿ ಸಂಪರ್ಕ ಕಡಿತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಸೇತುವೆ ಬಳಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಸೊನ್ನ ಬ್ಯಾರೇಜ್ನಿಂದ ಒಂದು ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದ್ದು, ಸೇತುವೆ ಮುಳುಗಡೆಯ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಲ್ಲಿ ನೆರೆ ಭೀತಿ, ಆತಂಕ ಉಂಟಾಗಿದೆ. ನದಿ ತಟದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಲಾಗಿದೆ. (ದಿಗ್ವಿಜಯ ನ್ಯೂಸ್)