ಕನ್ನಡ ಪುಸ್ತಕ ಪ್ರಾಧಿಕಾರದ ವಾರ್ಷಿಕ ಪ್ರಶಸ್ತಿ ಪ್ರಕಟ: ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನಕ್ಕೆ ಅತ್ಯುತ್ತಮ ಪ್ರಕಾಶನ ಸಂಸ್ಥೆಯ ಗರಿ

pustaka pradhikara1
Published on

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹಿರಿಯ ಸಾಹಿತಿ, ಚಿಂತಕ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರನ್ನು ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.

ಕನ್ನಡ ಪುಸ್ತಕ ಪ್ರಾಧಿಕಾರದಿಂದ ನೀಡಲಾಗುವ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಯನ್ನು ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನಕ್ಕೆ ನೀಡಲಾಗಿದೆ. ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಮೈಸೂರಿನ ಸಯ್ಯದ್ ಇಸಾಕ್ ಅವರನ್ನು ಆಯ್ಕೆ ಮಾಡಲಾಗಿದೆ.

ಡಾ. ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಡಾ. ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ನೀಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಹೇಳಿದ್ದಾರೆ. ಪುಸ್ತಕ ಬಹುಮಾನಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಕೆಲವು ದಿನಗಳಲ್ಲೇ ಪ್ರಕಟ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಅತ್ಯುತ್ತಮ ಪ್ರಕಾಶನ ಪ್ರಶಸ್ತಿ ಒಂದು ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ 75 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕ; ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ 50 ಸಾವಿರ ರೂ. ಹಾಗೂ ಪ್ರಶಸ್ತಿ ಫಲಕ; ಡಾ. ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ ರೂ.25 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net