

ಉಡುಪಿ: ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಮತ್ತು ಕೋಟತಟ್ಟು ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಗುವ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯನ್ನು ಕಾರಂತರ ಜನ್ಮದಿನವಾದ ಅ.10ರಂದು ಕೋಟ ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಪ್ರದಾನ ಮಾಡಲಾಗುವುದು ಎಂದು ಆಯ್ಕೆ ಸಮಿತಿ ಸದಸ್ಯ ಯು.ಎಸ್. ಶೆಣೈ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
15 ವರ್ಷದಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ವೀರಪ್ಪ ಮೊಯ್ಲಿ, ವೆಂಕಟಾಚಲಯ್ಯ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ್ ಕಾಸರವಳ್ಳಿ, ಜಯಶ್ರೀ, ಡಾ.ಎಂ.ಮೋಹನ ಆಳ್ವ, ಸಾಲುಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ.ಬಿ.ಎಂ.ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರಾ ಅವರಿಗೆ ಹಿಂದಿನ ವರ್ಷಗಳಲ್ಲಿ ಪ್ರಶಸ್ತಿ ನೀಡಲಾಗಿದೆ. ಸಾಹಿತ್ಯ ಕ್ಷೇತ್ರದ ಗಣನೀಯ ಸೇವೆ ಪರಿಗಣಿಸಿ ಈ ಸಾಲಿನಲ್ಲಿ ಭೈರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.
ಕೋಟತಟ್ಟು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಡಾ. ಅರುಣ್ ಕುಮಾರ್ ಶೆಟ್ಟಿ ಮಾತನಾಡಿ, ಕೋವಿಡ್-19 ಹಿನ್ನೆಲೆಯಲ್ಲಿ ಕಾರಂತ ಜನ್ಮದಿನೋತ್ಸವ ಅಂಗವಾಗಿ ಆನ್‌ಲೈನ್ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸುಗ್ಗಿ ಅಲ್ಮೋರ-2020 ಹಮ್ಮಿಕೊಳ್ಳಲಾಗಿದೆ. ಕೋವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಯಕ್ಷ-ಗಾನ-ನೃತ್ಯ ವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಾರಂತ ಪ್ರತಿಷ್ಠಾನ ಟ್ರಸ್ಟಿ ಸುಬ್ರಾಯ ಆಚಾರ್ಯ, ಕೋಟತಟ್ಟು ಪಿಡಿಒ ಶೈಲಾ ಪೂಜಾರಿ, ಕಾರಂತ ಥೀಂ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್ ಸುದ್ದಿಗೋಷ್ಠಿಯಲ್ಲಿದ್ದರು.