ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಸ್ಥಾನಕ್ಕೆ ಮಹಾದೇವ ಪ್ರಕಾಶ್ ರಾಜೀನಾಮೆ

mahadev prakash
Published on

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ನಂತ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾಗಿ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ನೇಮಕಗೊಂಡಿದ್ದರು. ಆದರೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ತಮ್ಮ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ಮಹದೇವ ಪ್ರಕಾಶ್ ಹೇಳಿದ್ದಾರೆ. ಆದರೆ ಯಾವುದೇ ಕಾರಣಗಳನ್ನು ಅವರು ನೀಡಲಿಲ್ಲ.

ಮಾಧ್ಯಮ ಸಲಹೆಗಾರರಾಗಿ ಕಳೆದ ಒಂದು ವರ್ಷದಿಂದ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ. ನನ್ನ ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.

ಮೂಲಗಳ ಪ್ರಕಾರ ಇತ್ತೀಚಿಗೆ ಮಹಾದೇವ ಪ್ರಕಾಶ್ ಕಾರ್ಯವೈಖರಿಗೆ, ಯಡಿಯೂರಪ್ಪ ಅವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ತಮ್ಮ ರಾಜಕೀಯ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ ಎಂ.ಬಿ.ಮರಂಕಲ್​ ಅವರನ್ನು ಅವರ ಹುದ್ದೆಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ತೆರವುಗೊಳಿಸಿದ್ದರು.

ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಮಹಾದೇವ ಅವರ ಹೆಸರು ಇತ್ತು. ಆದರೆ ಅವರು ಪ್ರಶಸ್ತಿಯನ್ನು ಸ್ವೀಕರಿಸಿರಲಿಲ್ಲ. 'ಪತ್ರಿಕೋದ್ಯಮದಲ್ಲಿ 46 ವರ್ಷಗಳ ಅನುಭವ ಹೊಂದಿರುವುದನ್ನು ಪರಿಗಣಿಸಿ ಮುಖ್ಯಮಂತ್ರಿಗಳು ನನ್ನನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.  ಆದರೆ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರನಾಗಿರುವ ತಾನು ಈ ಪ್ರಶಸ್ತಿಯನ್ನು ಪಡೆದುಕೊಂಡರೆ ಅದು ಅಷ್ಟು ಉಚಿತ ಎನಿಸುವುದಿಲ್ಲ. ಆದ್ದರಿಂದ ಈ ಪ್ರಶಸ್ತಿಯನ್ನು ಪಡೆದುಕೊಳ್ಳುತ್ತಿಲ್ಲ' ಎಂದು ಹೇಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net