ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಇನ್ಮುಂದೆ ಫೋಟೋ/ವಿಡಿಯೋ ಬ್ಯಾನ್​: ಹೊರಟಿದೆ ಈ ಸುತ್ತೋಲೆ

photo
Published on

ಬೆಂಗಳೂರು: ಇನ್ನು ಮುಂದೆ ಸರ್ಕಾರದ ಯಾವುದೇ ಇಲಾಖೆಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯುವುದು ಹಾಗೂ ವಿಡಿಯೋ ಮಾಡುವುದನ್ನು ನಿಷೇಧಿಸಲಾಗಿದೆ.

ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಇರುವ ಸರ್ಕಾರದ ಎಲ್ಲಾ ಇಲಾಖೆಗಳಿಗೂ ಈ ಆದೇಶ ಅನ್ವಯ ಆಗುತ್ತದೆ. ಹೊರಗಿನಿಂದ ಬರುವ ವ್ಯಕ್ತಿಗಳು ಕಚೇರಿ ಸಮಯದಲ್ಲಿ ಯಾವುದೇ ರೀತಿಯ ಫೋಟೋ ತೆಗೆಯುವುದು ಅಥವಾ ವಿಡಿಯೋ ಮಾಡುವುದನ್ನು ನಿಷೇಧಿಸಲಾಗಿದೆ.

ಬೇರೆ ಬೇರೆ ಕೆಲಸಗಳ ನಿಮಿತ್ತ ಸರ್ಕಾರಿ ಕಚೇರಿಗೆ ಬರುವವರು ಈ ರೀತಿ ಮಾಡುತ್ತಿರುವ ಹಿನ್ನೆಲೆಯಲ್ಲಿ, ಅಲ್ಲಿನ ನೌಕರರಿಗೆ ಅದರಲ್ಲಿಯೂ ಮಹಿಳಾ ಸಿಬ್ಬಂದಿಗೆ ಮುಜುಗರ ಆಗುತ್ತಿರುವ ಹಿನ್ನೆಲೆಯಲ್ಲಿ ಇಂಥದ್ದೊಂದು ಆದೇಶವನ್ನು ಸರ್ಕಾರ ಹೊರಡಿಸಿದೆ.


ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಬಂದು ಕಚೇರಿಯ ಫೋಟೋ/ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಹಾಗೂ ಇಂತಹ ಫೋಟೋ/ ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಸಂಬಂಧಿಸಿದ ಇಲಾಖೆ ಹಾಗೂ ಸರ್ಕಾರದ ಘನತೆಗೆ ಕುಂದು ಉಂಟಾಗುತ್ತಿದೆ. ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೊಟೋ/ವಿಡಿಯೋ ಮಾಡದಂತೆ ನಿಷೇಧಿಸಲಾಗಿದೆ ಎಂದು ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಸರ್ಕಾರದ ಅಧೀನ ಕಾರ್ಯದರ್ಶಿಗಳು ಸಹಿ ಮಾಡಿರುವ ಈ ಸುತ್ತೋಲೆಯನ್ನು ಸಾರ್ವಜನಿಕರ ಗಮನಕ್ಕೆ ತರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net