ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ ರಂಗಸ್ಥಳದಲ್ಲೇ ನಿಧನ

Mandarti Mela
Published on

ಉಡುಪಿ: ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ರಂಗಸ್ಥಳದಲ್ಲೇ ನಿಧನರಾಗಿದ್ದಾರೆ.

ಹೃದಯಾಘಾತದಿಂದ ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವಾಗ ಸಾಧು ಕೊಠಾರಿ ಮೃತಪಟ್ಟರು. ಶಿರಿಯಾರದ ಕಾಜ್ರಲ್ಲಿ ಸಮೀಪ ಕಲ್ಬೆಟ್ಟು ಎನ್ನುವಲ್ಲಿ ಮಂಗಳವಾರ ಬೆಳಗಿನ ಜಾವ ಘಟನೆ ನಡೆದಿದೆ.

ಮೇಳದ ಪ್ರಧಾನ ವೇಷಧಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಾಧು ಕೊಠಾರಿ, ಬೆಳಗಿನ ಜಾವ 3 ಗಂಟೆ ಸುಮಾರಿಗೆ ‘ಮಹಾಕಲಿ‌ ಮಗದೇಂದ್ರ’ ಪ್ರಸಂಗದಲ್ಲಿ ಮಾಗಧನಾಗಿ ಪ್ರದರ್ಶನ ನೀಡುತ್ತಿದ್ದ ವೇಳೆ ರಂಗದಲ್ಲೇ ಹೃದಯ ನೋವಿನಿಂದ ಕುಸಿದುಬಿದ್ದರು.

ತಕ್ಷಣ ವೇಷ ಕಳಚಿ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮೇಳದ ಮ್ಯಾನೇಜರ್, ಕೊಠಾರಿ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.

ಕೊಠಾರಿ ಪ್ರಸ್ತುತ ಬಾರಕೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು. ಸುಮಾರು 40 ವರ್ಷಕ್ಕೂ ಹೆಚ್ಚು ಕಾಲ ಯಕ್ಷ ತಿರುಗಾಟ ನಡೆಸಿ, ಬಡಗುತಿಟ್ಟಿನ ಉತ್ತಮ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಸಾಧು ಅವರನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net