

ಉಡುಪಿ: ಮ್ಯಾನ್ಯುಯಲ್ ಸ್ಕಾವೆಂಜಾರ್ಸ್ ಯಾವುದೇ ವ್ಯಕ್ತಿಯನ್ನು ತೊಡಗಿಸಿಕೊಳ್ಳುವುದು ರ್ನಿಬಂಧವಿದ್ದು, ಇದನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮ್ಯಾನ್ಯುಯಲ್ ಸ್ಕಾವೆಂಜಿಂಗ್ ದೇಶದಲ್ಲಿಯೇ ನಿಷೇಧಿತ ಚಟುವಟಿಕೆಯಾಗಿದ್ದು, ಈ ಕೆಲಸಕ್ಕೆ ಯಾವುದೇ ವ್ಯಕ್ತಿಯನ್ನು ಬಳಸಿಕೊಂಡರೆ ಪ್ರಕರಣ ದಾಖಲಿಸಲಾಗುವುದು. ಅಪರಾಧ ಸಾಬೀತಾದಲ್ಲಿ 2 ವರ್ಷ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ಇದೆ. ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದಿರಬೇಕು ಎಂದರು.
ಜಿಲ್ಲೆಯ ಎಲ್ಲಾ ನಗರ ಸ್ಥಳಿಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಯಂತ್ರಗಳ ಮೂಲಕವೇ ಶೌಚಗುಂಡಿಗಳನ್ನು ಸ್ವಚ್ಛಗೊಳಿಸಿ, ಅದನ್ನು ಸೂಕ್ತ ರೀತಿಯಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಸ್ವಚ್ಛತಾ ಕಾರ್ಯಗಳನ್ನು ಸಾಧ್ಯವಾದಷ್ಟು ಯಂತ್ರಗಳ ಸಹಾಯದಿಂದ ಮಾಡಲು ಮುಂದಾಗಬೇಕು ಎಂದರು.
ಸ್ವಚ್ಛತಾ ಕಾರ್ಮಿಕರು ಕಡ್ಡಾಯವಾಗಿ ಸುರಕ್ಷತಾ ಪರಿಕರಗಳನ್ನು ಬಳಸುವುದರೊಂದಿಗೆ ಸ್ವಚ್ಛತೆ ಕೈಗೊಳ್ಳಬೇಕು. ಬರಿಗೈಲಿನಿಂದ ಸ್ವಚ್ಛತೆ ಮಾಡಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಜಿಲ್ಲೆಯಲ್ಲಿ 154 ಜನ ಪೌರಕಾರ್ಮಿಕರನ್ನು ಹೊಸದಾಗಿ ನೇಮಿಸಿಕೊಳ್ಳಲಾಗಿದೆ. 10 ಜನ ಕಾರ್ಮಿಕರ ನೇಮಕಕ್ಕೆ ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು, ಪರಿಶೀಲನೆಯನ್ನು ಶೀಘ್ರವಾಗಿ ಕೈಗೊಳ್ಳುವುದರೊಂದಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಪೌರಾಯುಕ್ತ ರಾಯಪ್ಪ ಉಪಸ್ಥಿತರಿದ್ದರು.