ಹಾಸ್ಟೆಲ್‌ಗಳಲ್ಲಿ ಸುರಕ್ಷತೆಯನ್ನು ಪರಿಶೀಲಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

Safety Measures Committee Meeting Mandya
Published on

ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳಲ್ಲಿ ಯಾವುದೇ ಅವಘಡ ಸಂಭವಿಸಿದಂತೆ ವಹಿಸಿರುವ ಮುನ್ನಚ್ಚರಿಕೆ ಕ್ರಮಗಳನ್ನು ನಿಯಮಿತವಾಗಿ ಪರಿಶೀಲಿಸಿ ಹಾಗೂ ವಿದ್ಯಾರ್ಥಿಗಳು ಸುರಕ್ಷಿತವಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ವಿದ್ಯಾರ್ಥಿಗಳಿಗೆ ಸುರಕ್ಷತಾ ಕ್ರಮಗಳ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿನಿಲಯಗಳಲ್ಲಿ ಅಗ್ನಿ ಅವಘಡವಾದಲ್ಲಿ ಅಗ್ನಿಶಾಮಕ ವಸ್ತುಗಳು ಇರುವುದನ್ನು ಖಾತ್ರಿ ಪಡಿಸಿಕೊಳ್ಳಿ. ಹಾಸ್ಟೆಲ್ ಸುತ್ತಲೂ ಯಾವುದೇ ಅಪಾಯಕಾರಿ ವಿದ್ಯುತ್ ಕಂಬ ಅಥವಾ ಚರಂಡಿಗಳಿದ್ದಲ್ಲಿ ಸರಿಪಡಿಸಿ. ಪ್ರತಿ ವಿದ್ಯಾರ್ಥಿಗೂ ಪ್ರತ್ಯೇಕ ಕಡತ ತೆರೆಯಿರಿ. ಅದರಲ್ಲಿ ಅವರ ಆರೋಗ್ಯ ತಪಾಸಣೆ, ರಜೆ ಪಡೆದಿದ್ದಲ್ಲಿ ಅದರ ವಿವರ, ಪಾಲಕರ ಭೇಟಿ ಮಾಹಿತಿ ಸಂಗ್ರಹಿಸಿ ಎಂದರು.

ವಾಟರ್ ಫಿಲ್ಟಡ್, ಸಿ.ಸಿ ಕ್ಯಾಮೆರಾ, ಯುಪಿಎಸ್ ಅಥವಾ ಜೆನರೇಟರ್ ಪರಿಶೀಲಿಸಿ. ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳಿಗೆ ಸಂಬಂಧಿಸಿದಂತೆ ಆಯಾ ತಾಲೂಕಿನ ತಹಸೀಲ್ದಾರ್ ಸಂಪರ್ಕಿಸಿ ಸರ್ಕಾರಿ ಜಾಗ ಗುರುತಿಸಿಕೊಳ್ಳಿ. ಆಹಾರಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬಾರದಂತೆ ನೋಡಿಕೊಳ್ಳಿ. ಹವಾಮಾನ ಕಾರಣ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದರಿಂದ ಸ್ನಾನಕ್ಕೆ ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಿ. ಸುರಕ್ಷತೆ ಜತೆಗೆ ಈ ಬಾರಿಯ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ತಯಾರಿ ನಡೆಸುವಂತೆ ಪ್ರೋತ್ಸಾಹಿಸಿ ಎಂದು ಹೇಳಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ.ಸಿದ್ದಲಿಂಗೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಧನುಷ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಎಚ್.ಎಸ್.ನಿರ್ಮಲಾ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net