ನ. 9ರಂದು ಸಹ್ಯಾದ್ರಿಯಲ್ಲಿ ಏರ್ ಶೋ , ಸ್ಕೈ ಡೈವಿಂಗ್ ಪ್ರದರ್ಶನ

Air-show
Published on


ಮಂಗಳೂರು : ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ವತಿಯಿಂದ ನ. 7ರಿಂದ 9ರವರೆಗೆ ಕಾಲೇಜಿನ ಕ್ಯಾಂಪಸ್‌ನಲ್ಲಿ ಸಿನೆರ್ಜಿಯಾ -2024 ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ನಡೆಯಲಿದೆ. ನ. 9ರಂದು ಬೆಳಗ್ಗೆ 9.30ರಿದ 10.30ರವರೆಗೆ ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗುವಂತೆ ಏರ್ ಶೋ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಎಸ್. ಇಂಜಗನೇರಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನ. 7ರಂದು ಬೆಳಗ್ಗೆ 10ಕ್ಕೆ ಸಿನೆರ್ಜಿಯಾ ಉದ್ಘಾಟನೆಗೊಳ್ಳಲಿದ್ದು, ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮುಂತಾದ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ .200ಕ್ಕೂ ಅಧಿಕ ಶಾಲಾ ಕಾಲೇಜುಗಳಿಂದ 5000ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ರು.
ಐಐಟಿ ಮತ್ತು ಎನ್‌ಐಟಿಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಅದೇ ಮಾದರಿಯಲ್ಲಿ ಸಹ್ಯಾದ್ರಿಯಲ್ಲಿ ಸಿನೆರ್ಜಿಯಾ ಆಯೋಜಿಸಲಾಗುತ್ತಿದೆ. ಯುವ ಪ್ರತಿಭೆಗಳಿಗೆ ವಿಜ್ಞಾನ, ತಂತ್ರಜ್ಞಾನ ಮತ್ತು ಉದ್ಯಮಶೀಲತೆಯ ಅತ್ಯಾಧುನಿಕ ಕ್ಷೇತ್ರಗಳಲ್ಲಿ ತೊಡಿಸಿಕೊಳ್ಳಲು ವೇದಿಕೆಯನ್ನು ಕಲ್ಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್ (ಎಸ್‌ಎಸ್‌ಟಿಎಚ್) 11ನೇ ಆವೃತ್ತಿ, ಕಾರ್ಯಕ್ರಮದ ಪ್ರಮುಖ ಅಂಶವಾಗಿದ್ದು, ವಿವಿಧ ಪ್ರೌಢಶಾಲಾ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳ ನವೀನ ವೈಜ್ಞಾನಿಕ ಮಾದರಿಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ . ನ.9ರಂದು ನಡೆಯಲಿರುವ ಏರೋಬ್ಯಾಟಿಕ್,ಸ್ಕೈಡೈವಿಂಗ್ ಸಾಹಸಗಳು ಮತ್ತು ಏರ್‌ಶೋಗಳು ಸಾರ್ವಜನಿಕರನ್ನು ಆಕರ್ಷಿಸಲಿದೆ ಎಂದು ಸಂಸ್ಥೆಯ ಉಪ ಪ್ರಾಂಶುಪಾಲ ಡಾ. ಸುಧೀರ್ ಶೆಟ್ಟಿ ತಿಳಿಸಿದರು.
ಕಾಲೇಜಿನ ಬೇಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಪ್ರಶಾಂತ್ ರಾವ್, ಕಾರ್ಯಕ್ರಮದ ವಿದ್ಯಾರ್ಥಿ ಸಂಯೋಜಕರಾದ ತೇಜಸ್ ನಾಯಕ್, ಜೀವಿತಾ ಜೆ.ಎಸ್., ಅಮೃತ್‌ರಾಜ್ ಉಪಸ್ಥಿತರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net