

ಮಂಗಳೂರು : ಸಾರ್ವಜನಿಕರಿಗೆ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಕಾಲಮಿತಿಯಲ್ಲಿ ನೀಡುವ ಉದ್ದೇಶದಿಂದ ಜಾರಿಗೆ ಬಂದಿರುವ ಸಕಾಲ ಯೋಜನೆಯಡಿ ಸತತವಾಗಿ ಎರಡನೇ ಬಾರಿ ಸೆಪ್ಟೆಂಬರ್ನ ಮಾಸಿಕ ಶ್ರೇಯಾಂಕದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿದೆ.
ದ.ಕ.ಜಿಲ್ಲೆಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಒಟ್ಟು 85,568 ಅರ್ಜಿಗಳನ್ನು ಸ್ವೀಕರಿಸಿದ್ದು , ಈ ಪೈಕಿ 82,058 ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗಿದೆ . ಶೇ. 98.45 ಅರ್ಜಿಗಳನ್ನು ಶೀಘ್ರವಾಗಿ ಸಾರ್ವಜನಿಕರಿಗೆ ದೊರಕಿಸುವಲ್ಲಿ ಯಶಸ್ವಿಯಾಗಿದೆ. ಶೇ. 9.63 ಅರ್ಜಿ ತಿರಸ್ಕೃತಗೊಂಡಿದ್ದು, ರಾಜ್ಯದಲ್ಲೇ ಇದು ಅತೀ ಕಡಿಮೆಯಾಗಿದೆ.
ಸಾರ್ವಜನಿಕರು ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ತಮಗೆ ಅಗತ್ಯವಿರುವ ಸೇವೆಗಳನ್ನು ಪಡೆಯಲು ಸಲ್ಲಿಸುವ ಅರ್ಜಿಗಳನ್ನು ಸಕಾಲ ಯೋಜನೆಯ ವ್ಯಾಪ್ತಿಯೊಳಗೆ ತೆಗೆದುಕೊಳ್ಳಲಾಗುತ್ತಿದೆ. ಸಾರ್ವಜನಿಕರು ನೇರವಾಗಿ ಸಲ್ಲಿಸುವ ಅರ್ಜಿಗಳನ್ನು ಸಹ ಸಕಾಲ ವ್ಯಾಪ್ತಿಗೆ ಸೇರ್ಪಡೆಗೊಳಿಸಿ ಇತ್ಯರ್ಥಪಡಿಸಲಾಗುತ್ತಿದೆ. ಯಾವುದೇ ಅರ್ಜಿಗಳು ಸಕಾಲದಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಲಾಗಿದ್ದು, ಇದರಿಂದ ಸಾರ್ವಜನಿಕರಿಗೆ ಅವರು ಕೋರಿರುವ ಸೇವೆಗಳು ನಿರ್ದಿಷ್ಟ ಅವಧಿಗಿಂತ ಮುಂಚಿತವಾಗಿಯೇ ಲಭ್ಯವಾಗುತ್ತಿವೆ. ರಾಜ್ಯದಲ್ಲಿ ಸಕಾಲ ಯೋಜನೆಯಲ್ಲಿ ಸರ್ಕಾರದ 100 ವಿವಿಧ ಇಲಾಖೆ ಮತ್ತು ಸಂಸ್ಥೆಗಳ ವ್ಯಾಪ್ತಿಯಲ್ಲಿರುವ 1181 ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸಲಾಗುತ್ತಿದೆ.
ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಹಾಗೂ ವಿಳಂಬ ವಿಲೇವಾರಿಯಾಗಿರುವ ಅರ್ಜಿಗಳ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಅವರು ಪರಿಶೀಲನೆ ಮಾಡಿ ಪ್ರತೀ ವಾರ ಸಭೆಗಳನ್ನು ನಡೆಸುವ ಮೂಲಕ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುತ್ತಿದ್ದಾರೆ. ಕಾಲಮಿತಿಯೊಳಗೆ ಎಲ್ಲ ಅರ್ಜಿಗಳನ್ನು ವಿಲೇವಾರಿಗೊಳಿಸಲು ಹಾಗೂ ಸಾರ್ವಜನಿಕರಿಗೆ ಸರ್ಕಾರದ ಸೇವೆಗಳು ಶೀಘ್ರದಲ್ಲಿ ದೊರೆಯುವಂತೆ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತವಾಗಿ ತಮ್ಮ ಇಲಾಖೆಯ ಸೇವೆಗಳನ್ನು ಒದಗಿಸುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.