

ಉಡುಪಿ: ದೇಶದ ಪ್ರಜಾಪ್ರಭ್ವುತ ವ್ಯವಸ್ಥೆ ಗಟ್ಟಿಗೊಳಿಸಲು ಸಂವಿಧಾನವೇ ಮೂಲ ಕಾರಣ. ಇದರ ಆಶಯದಂತೆ ನಡೆದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಡಯಟ್ ಸಹಯೋಗದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಪ್ರಭುಗಳ ಆಯ್ಕೆ ಪ್ರಜೆಗಳಿಂದ ಆದರೂ ಇಬ್ಬರು ಸಂವಿಧಾನದ ಚೌಕಟ್ಟಿನಲ್ಲಿಯೇ ಒಳಪಡುತ್ತಾರೆ. ದೇಶದ ಪ್ರತಿಯೊಂದು ಕಾನೂನು ಸಂವಿಧಾನದ ಅಡಿಯಲ್ಲಿ ಬರುತ್ತದೆ. ಪ್ರತಿಯೊಂದಕ್ಕೂ ಸಂವಿಧಾನವೇ ಮೂಲ. ಸಂವಿಧಾನವನ್ನು ಗೌರವಿಸುವುದು, ಅದಕ್ಕೆ ಬದ್ಧವಾಗಿರುವುದು ಆದ್ಯ ಕರ್ತವ್ಯವಾಗಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ನಮ್ಮ ನೆರೆ ಹೊರೆಯ ಅನೇಕ ದೇಶಗಳಲ್ಲಿ ಅರಾಜಕತೆ ಉಂಟಾಗಿದೆ. ಹೀಗಾಗಿ ಸಂವಿಧಾನದ ಆಶಯದಂತೆ ನಡೆದುಕೊಂಡಲ್ಲಿ ದೇಶ ಸದೃಢವಾಗಲು ಸಾಧ್ಯ ಎಂದರು.
ರಾಜ್ಯ ಸರ್ಕಾರ ಸಂವಿಧಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿಯನ್ನು ರಾಜ್ಯದಾದ್ಯಂತ ಕೈಗೊಂಡಿದೆ. ಜಿಲ್ಲೆಯ 155 ಗ್ರಾಮ ಪಂಚಾಯಿತಿಗಳು ಹಾಗೂ 6 ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಮೂಡಿಸುವ ಸ್ಥಬ್ಧಚಿತ್ರದೊಂದಿಗೆ ಜಾಗೃತಿ ಮೂಡಿಸುವ ಕಾರ್ಯಗಳನ್ನು ಹಾಗೂ ಅನೇಕ ಬೈಕ್ ರ್ಯಾಲಿಗಳು, ಕಡಲ ತೀರದಲ್ಲಿ ವಿಶೇಷ ಕಾರ್ಯಕ್ರಮಗಳು, ಕ್ರೀಡಾಪಂದ್ಯಗಳು ಸೇರಿದಂತೆ ಮತ್ತಿತರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವು ಯಶಸ್ವಿಯಾಗಿ ನಡೆದಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್. ಸಂವಿಧಾನದ ಪೀಠಿಕೆ ಬೋಧಿಸಿದರು. ಸಮಾಜ ಕಲ್ಯಾಣ ಇಲಾಖೆಯ ಅನಿತಾ ಮಡ್ಲೂರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಪ್ರಾಂಶುಪಾಲೆ ಡಾ. ಸುಮಾ, ಮೂಡುಬೆಳ್ಳೆ ಕಾಲೇಜಿನ ಪ್ರಾಂಶುಪಾಲ ಎಡ್ವರ್ಡ್, ಪಾಲಿಟೆಕ್ನಿಕ್ ಕಾಲೇಜಿನ ಶಿವಪ್ರಸಾದ್ ಶೆಟ್ಟಿ ಹಾಗೂ ಸುನಿಲ್ ಉಪಸ್ಥಿತರಿದ್ದರು. ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ದಯಾನಂದ ಸ್ವಾಗತಿಸಿ, ಮಲ್ಪೆ ಕಾಲೇಜಿನ ಪ್ರಾಂಶುಪಾಲ ವರ್ಗೀಸ್ ವಂದಿಸಿದರು.
ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಿಂದ ಸಿಟಿ ಬಸ್ ಮಾರ್ಗವಾಗಿ ನಗರದ ಪ್ರಮುಖ ರಸ್ತೆಗಳ ಮೂಲಕ ಚಂಡೆ ವಾದ್ಯಗಳೊಂದಿಗೆ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಸಾಗಿತು.