

ವಿರಾಜಪೇಟೆ: ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಸಂಕೇತ್ ಪೂವಯ್ಯ ಅವರ ನೂತನ ಕಚೇರಿಯನ್ನು ಮಂಗಳವಾರ ವಿರಾಜಪೇಟೆಯ ಶಾಸಕ ಎಸ್.ಪೊನ್ನಣ್ಣ ರಿಬ್ಬನ್ ಕತ್ತರಿಸುದರ ಮೂಲಕ ಉದ್ಘಾಟಿಸಿದರು.
ಹಲವು ದಶಕಗಳಿಂದ ಸಂಕೇತ್ ಪೂವಯ್ಯ ಅವರು ಹಲವಾರು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಬಂದಿದ್ದಾರೆ. ಈ ಕಾರಣದಿಂದ ರಾಜ್ಯ ಸರ್ಕಾರ ಅವರಿಗೆ ಈ ಹುದ್ದೆಯನ್ನು ನೀಡಿದ್ದು, ಅರಣ್ಯ ಇಲಾಖೆ ಹಾಗೂ ಸಾರ್ವಜನಿಕರೊಂದಿಗೆ ನಿಕಟ ಸಂಬಂಧವನ್ನು ಹೊಂದಿ ವನ್ಯಜೀವಿ ಹಾಗೂ ಮಾನವ ಸಂಘರ್ಷಕ್ಕೆ ತ್ವರಿತವಾಗಿ ಸ್ಪಂದಿಸಲು, ಅಧಿಕಾರಿ ವರ್ಗ ಹಾಗೂ ಸಾರ್ವಜನಿಕರೊಂದಿಗೆ ಸಮಸ್ಯೆಗಳನ್ನು ಚರ್ಚಿಸಲು ಈ ಕಚೇರಿಯನ್ನು ನಿರ್ಮಿಸಲಾಗಿದೆ. ಈ ಮೂಲಕ ಸಮಸ್ಯೆ ಸರ್ಕಾರದ ಗಮನಕ್ಕೆ ತಂದು ಆದಷ್ಟು ಬೇಗ ಸಮಸ್ಯೆ ಪರಿಹಾರಕ್ಕೆ ಶ್ರಮಿಸಲು ಈ ಕಚೇರಿ ಸಹಕಾರಿ ಆಗಿದೆ ಎಂದರು.
ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಮಾತನಾಡಿ, ಕೊಡಗಿನಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ವನ್ಯಜೀವಿ ಮಾನವ ಸಂಘರ್ಷ ನಡೆಯುತ್ತಿದೆ. ಇದನ್ನು ವೈಜ್ಞಾನಿಕವಾಗಿ ಪರಿಹರಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತೇನೆ. ಸಮಸ್ಯೆಗಳಿಗೆ ಆದಷ್ಟು ತ್ವರಿತಗತಿಯಲ್ಲಿ ಪರಿಹಾರವನ್ನು ದೊರಕಿಸುವ ಉದ್ದೇಶದಿಂದ ಶಾಸಕರು ಈ ಕಚೇರಿಯನ್ನು ನಿರ್ಮಿಸಿದ್ದಾರೆ. ಸಾರ್ವಜನಿಕರು ಯಾವುದೇ ಸಮಯದಲ್ಲದರೂ ಬಂದು ವನ್ಯಜೀವಿ ಮಾನವ ಸಂಘರ್ಷದ ಕುರಿತಾಗಿ ದೂರು ಸಲ್ಲಿಸಬಹುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಎಂಎಲ್ಸಿ ಅರುಣ್ ಮಾಚಯ್ಯ ಇತರರು ಇದ್ದರು.