

ಬೇಲೂರು: ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಎಲ್ಲ ಸಭೆ, ಸಮಾರಂಭಗಳಲ್ಲೂ ಶೇ.50ರಷ್ಟು ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಸೋಮವಾರ ಆಯೋಜಿಸಿದ್ದ ಸಾವಿತ್ರಿಬಾಯಿ ಫುಲೆ ಅವರ 194ನೇ ಜಯಂತಿ ಹಾಗೂ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಉದ್ಘಾಟನೆ, ಪದಗ್ರಹಣ ಮತ್ತು ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲೂ ತಮ್ಮ ಛಾಪನ್ನು ಮೂಡಿಸಿ ಎತ್ತರಕ್ಕೆ ಬೆಳೆದಿರುವುದು ಸಂತೋಷದ ಸಂಗತಿಯಾಗಿದೆ. ಈಗಾಗಲೇ ಉದ್ಯೋಗ, ರಾಜಕಾರಣ ಸೇರಿದಂತೆ ಇತರ ಕ್ಷೇತ್ರಗಳಲ್ಲೂ ಅವಕಾಶಗಳು ಸಿಕ್ಕಿದೆ ಎಂದರು.
ಪುರಸಭೆ ಅಧ್ಯಕ್ಷ ಎ.ಆರ್.ಅಶೋಕ್ ಮಾತನಾಡಿ, ಶ್ರೇಣೀಕೃತ ಜಾತಿ ವ್ಯವಸ್ಥೆಯ ನಡುವೆಯೆ ಮಹಿಳೆಯರ ಸಬಲೀಕರಣಕ್ಕಾಗಿ ಎಲ್ಲ ನೋವುಗಳನ್ನು ಸಹಿಸಿಕೊಂಡೇ ಮಹಿಳೆಯರಿಗೆ ಶಿಕ್ಷಣ ನೀಡಿದ ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಎಂಬುದನ್ನು ಯಾರೂ ಮರೆಯಬಾರದು. ಇಂದು ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ, ಸಂಸ್ಕೃತಿಕವಾಗಿ ವಿವಿಧ ಕ್ಷೇತ್ರಗಳಲ್ಲಿ ತೊಡಗಿರುವುದು ಕಾಣುತ್ತೇವೆ. ಆದರೆ, ಇಂತಹ ಮಹಾನ್ ತಾಯಿಯ ಹೆಸರಲ್ಲಿ ಶಿಕ್ಷಕಿಯರು ಸಂಘ ಸ್ಥಾಪಿಸಿರುವುದು ಶ್ಲಾಘನೀಯ. ಸಂಘದ ಮೂಲಕ ಬಡ ಮಕ್ಕಳ ಶಿಕ್ಷಣಕ್ಕೆ ಮತ್ತು ಸಮಾಜಮುಖಿ ಕೆಲಸಗಳಿಗೆ ಒತ್ತು ನೀಡಬೇಕೆಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಮಾತನಾಡಿ, ದೇಶದ ಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಸಾಧನೆ ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಶಿಕ್ಷಕಿಯರು ಅವರನ್ನು ಮಾದರಿಯನ್ನಾಗಿ ತೆಗೆದುಕೊಂಡು ಮಾದರಿ ಕೆಲಸಗಳನ್ನು ಮಾಡಬೇಕೆಂದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಣ್ಣಪ್ಪ, ಆರ್.ಆಶಾ, ಬಿಆರ್‌ಸಿ ಶಿವಮರಿಯಪ್ಪ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಹೇಮಂತ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಾಲಾಕ್ಷ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಧನಂಜಯ, ಪತ್ರಕರ್ತರ ಸಂಘದ ಅಧ್ಯಕ್ಷೆ ಭಾರತೀಗೌಡ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಸುಧಾ ಇತರರಿದ್ದರು.