

ಹಿರಿಯೂರು: ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯದ ಏಳು ಕೋಟಿ ಜನ ಧಿಕ್ಕಾರ ಕೂಗಬೇಕು ಎಂದು ಕೃಷಿ ಸಚಿವ ಚೆಲು ವರಾಯ ಸ್ವಾಮಿ ಹೇಳಿದರು.
ತಾಲೂಕಿನ ಬಬ್ಬೂರು ಫಾರಂನಲ್ಲಿ ಶುಕ್ರವಾರ ಆಯೋಜಿಸಿದ್ದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಶತಮಾನೋತ್ಸವ ಸಮಾರಂಭ, ಸಿರಿಧಾನ್ಯ ಮೇಳ ಮತ್ತು ತೋಟಗಾರಿಕೆ ಬೆಳೆಗಳ ವಿಚಾರ ಸಂಕಿರಣದಲ್ಲಿ ಹಸ್ತಪ್ರತಿ ಬಿಡುಗಡೆ ಮಾಡಿ ಮಾತನಾಡಿದರು.
ರಾಜ್ಯದ ಸಾಲವನ್ನು 2ರಿಂದ 5 ಲಕ್ಷ ಕೋಟಿ ರೂ.ಗೆ ಹೆಚ್ಚಿಸಿದ್ದು ಬಿಜೆಪಿ,ಜೆಡಿಎಸ್‌ನ ಸಾಧನೆ ಎಂದು ವ್ಯಂಗ್ಯವಾಡಿದರು. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಪ್ರಸಕ್ತ ವರ್ಷವಿರುವ 35 ಸಾವಿರ ಕೋಟಿ ರೂ.ಅನುದಾನವನ್ನು ಮುಂದಿನ ವರ್ಷದಿಂದ 55 ಸಾವಿರ ಕೋಟಿ ರೂ.ಅನುದಾನ ನೀಡಲಾಗುವುದು ಎಂದರು.
ಕೃಷಿ ಕ್ಷೇತ್ರದ ಸುಧಾರಣೆಗೆ 100 ಹೈಟೆಕ್‌ಹಬ್ ಸ್ಥಾಪನೆ,ರಾಜ್ಯದಲ್ಲಿ ಮತ್ತೆ ಕೃಷಿ ಭಾಗ್ಯ ಯೋಜನೆ ಜಾರಿ,ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹಧನ ಮೊತ್ತ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು. ಪ್ರಕೃತಿಯಲ್ಲಾಗುತ್ತಿರುವ ಬದಲಾವಣೆಗೆ ಅನುಗುಣವಾಗಿ ಪರ್ಯಾಯ ಬೆಳೆಗಳ ಸಂಶೋಧನೆಗೆ ಒತ್ತು ನೀಡಬೇಕಿದೆ. ರೈತ ಉತ್ಪಾದಕ ಸಂಸ್ಥೆಗಳಿಗೆ ನೀಡುತ್ತಿರುವ ಸಾಲದ ಪ್ರಮಾಣವನ್ನು ಹೆಚ್ಚಿಸಲಾಗಿದೆ ಎಂದರು.