

ಚಿಕ್ಕಮಗಳೂರು: ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡರೂ ಜಿಲ್ಲೆಯ ಎಲ್ಲ ಶಾಸಕರು, ಜನಪ್ರತಿನಿಧಿಗಳು ಅಗತ್ಯ ಸಹಕಾರ ನೀಡಲಿದ್ದಾರೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ನಗರದ ಜಿಲ್ಲಾ ಆಟದ ಮೈದಾನದಲ್ಲಿ ಶನಿವಾರ ಪೊಲೀಸ್ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ವ್ಯಸನ ಮುಕ್ತ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾದವರು ತಮ್ಮ ಜೀವನ ಹಾಳು ಮಾಡಿಕೊಳ್ಳುವ ಜತೆಗೆ ಸಮಾಜಕ್ಕೂ ಮಾರಕವಾಗುವ ಸಾಧ್ಯತೆಯಿದೆ. ಹೀಗಾಗಿ ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಘೋಷಿಸಿದರು.
ಯುವಜನತೆ ಮಾದಕ ವಸ್ತುಗಳಿಗೆ ಗುಡ್ ಬೈ ಹೇಳಿ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮಾದಕ ವಸ್ತುಗಳು ಆರೋಗ್ಯಕ್ಕೆ ಹಾನಿಕಾರಕ ಎಂದು ಸರ್ಕಾರ ಹಾಗೂ ಆರೋಗ್ಯ ಇಲಾಖೆ ಸಾಕಷ್ಟು ಪ್ರಚಾರ ಮಾಡಿದರೂ ಎಲ್ಲರೂ ಅವುಗಳಿಗೇ ಮಾರು ಹೋಗುತ್ತಿದ್ದಾರೆ. ಮಾದಕ ವಸ್ತುಗಳ ಬಗ್ಗೆ ಸರ್ಕಾರ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಶಾಲೆ ಕಾಲೇಜುಗಳಿಂದ ತಿಳುವಳಿಕೆ ಮೂಡಿಸುವ ಜತೆಗೆ ಪಾಲಕರೂ ಸಹ ತಮ್ಮ ಮಕ್ಕಳ ಶಾಲೆ, ಕಾಲೇಜುಗಳಿಗೆ ತೆರಳಿ ಮಕ್ಕಳ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಮಾದಕ ವಸ್ತುಗಳ ಬಳಕೆ ಹಾಗೂ ಮಾರಾಟ, ಬೆಳೆಯುವವರ ಬಗ್ಗೆ ಬಹಳ ಎಚ್ಚರಿಕೆ ವಹಿಸಲಾಗುತ್ತಿದೆ. ಆದರೂ ಜಿಲ್ಲೆಗೆ ಮಾದಕ ವಸ್ತುಗಳು ಬರುತ್ತಿವೆ. ಅದನ್ನೂ ತಡೆಯುವ ಕೆಲಸವಾಗುತ್ತಿದೆ. ವಿದ್ಯಾರ್ಥಿಗಳು ಈ ವಯಸ್ಸಿನಿಂದಲೇ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಕುರಿತು ಹಾಗೂ ತಮ್ಮ ಮುಂದಿನ ಆರೋಗ್ಯಕರ ಜೀವನದ ಕುರಿತು ಯೋಚಿಸಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಕರೆ ನೀಡಿದರು.