

ಕಾರವಾರ: ಒಳ ಮೀಸಲಾತಿ ಜಾರಿ ಮಾಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಪ್ರಮುಖರು ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ಮೂಲಕ ಸಲ್ಲಿಸಿದರು. ನಗರದ ಪ್ರಮುಖ ಬೀದಿಗಳಲ್ಲಿ ತಮಟೆ ಹೊಡೆದು ಮೆರವಣಿಗೆ ನಡೆಸಿದರು. ಒಳ ಮೀಸಲಾತಿ ಬೇಕೇ ಬೇಕು ಎಂಬ ಘೋಷಣೆಗಳನ್ನು ಮೊಳಗಿಸಿದರು.
ಎಸ್‌ಸಿ, ಎಸ್‌ಟಿಗಳ ಮೀಸಲಾತಿಯಲ್ಲಿ ಒಳ ಮೀಸಲಾತಿ ನೀಡುವ ಅಧಿಕಾರವು ರಾಜ್ಯ ಸರ್ಕಾರಕ್ಕಿದೆ ಎಂದು ಕಳೆದ ಆಗಸ್ಟ್ 1 ರಂದು ಸುಪ್ರೀಂ ಕೋರ್ಟ್ ಪೂರ್ಣ ಪೀಠವು ತೀರ್ಪು ನೀಡಿದೆ. ಈಗಾಗಲೇ ರಾಜ್ಯ ಸರ್ಕಾರ ಸದಾಶಿವ ಆಯೋಗ ರಚಿಸಿ ಪಡೆದ ಅಧ್ಯಯನ ವರದಿಯಲ್ಲಿ ಒಳ ಮೀಸಲಾತಿ ಜಾರಿ ಮಾಡಬೇಕು ಎಂಬ ಸಲಹೆ ನೀಡಲಾಗಿತ್ತು. ಸದಾಶಿವ ಆಯೋಗದ ವರದಿಯಲ್ಲಿ ಇರುವಂತೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿರುವ ಉಪ ಪಂಗಡಗಳಿಗೆ ಒಳ ಮೀಸಲಾತಿಯನ್ನು ನಿಗದಿ ಮಾಡಬೇಕು. ಇದನ್ನು ನಾವು ಬೇಡುತ್ತಿಲ್ಲ. ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ. ಸರ್ಕಾರ ಇದನ್ನು ಶೀಘ್ರ ಜಾರಿಗೆ ತರಬೇಕು ಎಂದು ಮನವಿ ಮಾಡಿದರು.
ಒಳ ಮೀಸಲಾತಿ ಜಾರಿಯಾಗುವವರೆಗೆ ಬ್ಯಾಕ್‌ಲಾಗ್ ಹುದ್ದೆ ಹಾಗೂ ಇತರ ನೇಮಕಾತಿಯನ್ನು ಸ್ಥಗಿತ ಮಾಡಬೇಕು. ಜಾತಿ ಗಣತಿ ವರದಿಯನ್ನು ಕೈಬಿಟ್ಟು ಒಳ ಮೀಸಲಾತಿ ವರದಿಯ ಜಾರಿ ಮಾಡಬೇಕು ಎಂದು ಒತ್ತಾಯಿಸಲಾಯಿತು.