ಸ್ಕಾೃನಿಂಗ್ ಸೆಂಟರ್‌ಗಳ ನವೀಕರಣ ಕಡ್ಡಾಯ:ಡಿಎಚ್‌ಒ

SCANING REGISTRATION DHO KOPPAL MEETING
ಡಾ.ಟಿ.ಲಿಂಗರಾಜು
Published on

ಕೊಪ್ಪಳ: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ಕಾೃನಿಂಗ್ ಸೆಂಟರ್‌ಗಳು ಕಡ್ಡಾಯವಾಗಿ ನಿಗದಿತ ಅವಧಿಯಲ್ಲಿ ನವೀಕರಣ ಮಾಡಿಕೊಳ್ಳುವಂತೆ ಡಿಎಚ್‌ಒ ಡಾ.ಟಿ.ಲಿಂಗರಾಜು ಸೂಚಿಸಿದ್ದಾರೆ.

ನಗರದ ಆರೋಗ್ಯ ಇಲಾಖೆ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಪಿ.ಸಿ. ಮತ್ತು ಪಿಎನ್‌ಡಿಟಿ ಕಾಯ್ದೆ ಹಾಗೂ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಎಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳು ಪಿ.ಸಿ, ಪಿ.ಎನ್.ಡಿ.ಟಿ ಕಾಯ್ದೆಯಡಿ ನಿಯಮಾನುಸಾರ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಅವಧಿ ಪೂರ್ಣಗೊಳ್ಳುವುದಕ್ಕಿಂತ ಮೂರು ತಿಂಗಳ ಮುಂಚೆ ಅರ್ಜಿ ಸಲ್ಲಿಸಿ ನವೀಕರಣ ಮಾಡಿಕೊಳ್ಳಬೇಕು. ಸ್ಕ್ಯಾನಿಂಗ್ ಕುರಿತಾದ ಮಾರ್ಗಸೂಚಿಗಳನ್ನು ಪಾಲಿಸಿ.

ನಿಗದಿತ ನಮೂನೆಗಳನ್ನು ನಿರ್ವಹಿಸಿ. ನೋಂದಣಿ/ಪರವಾನಗಿ ನವೀಕರಣವಿಲ್ಲದ ಆರೋಗ್ಯ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಿಯಮ ಪಾಲನೆ ಹಾಗೂ ದಾಖಲಾತಿ ನಿರ್ವಹಿಸದ ಆರೋಗ್ಯ ಸಂಸ್ಥೆಗಳನ್ನು ಮುಚ್ಚಿಲಾಗುವುದೆಂದು ತಿಳಿಸಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರನಾಥ ಮಾತನಾಡಿ, ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧಿಸಲಾಗಿದೆ. ಸರ್ಕಾರಿ ಅಥವಾ ಖಾಸಗಿ ವೈದ್ಯರು ಇಂತಹ ಕೃತ್ಯಗಳಲ್ಲಿ ಭಾಗಿಯಾದಲ್ಲಿ ಅವರಿಗೆ ಕಾರಾಗೃಹ ಶಿಕ್ಷೆ ಸಹಿತ ದಂಡ ವಿಧಿಸಲಾಗುವುದು.

ಮೊದಲ ಅಪರಾಧಕ್ಕೆ 5 ವರ್ಷ ವೈದ್ಯಕೀಯ ಪರವಾನಿಗೆ ರದ್ದುಪಡಿಸಲಾಗುವುದು. ಮುಂದುವರಿದಲ್ಲಿ ವೈದ್ಯ ವೃತ್ತಿಗೆ ಆಜೀವ ನಿಷೇಧ ಹೇರಲಾಗುವುದು. ಮಹಿಳೆ ಅಥವಾ ಅವರ ಕುಟುಂಬಸ್ಥರು ವೈದ್ಯರ ಮೇಲೆ ಒತ್ತಡ ಹೇರಿದರೆ, ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

ಪಿ.ಸಿ, ಪಿ.ಎನ್.ಡಿ.ಟಿ ಜಿಲ್ಲಾ ಮಟ್ಟದ ಸಲಹಾ ಸಮಿತಿಗೆ ಡಾ.ಈಶ್ವರ ಸವಡಿಯನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಜಿಲ್ಲೆಯ ವಿವಿಧ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳ ನೋಂದಣಿ, ನವೀಕರಣ ಹಾಗೂ ಹೊಸ ಅರ್ಜಿಗಳಿಗೆ ಅನುಮತಿ ಕುರಿತು ಚರ್ಚಿಸಲಾಯಿತು.

ಸಮಿತಿ ಸದಸ್ಯರಾದ ವಕೀಲ ಶಂಕರ, ಡಾ.ಗಿರೀಶ್, ಡಾ.ಶ್ರೀನಿವಾಸ ಹ್ಯಾಟಿ, ಯುನಿಸೆಫ್ ಜಿಲ್ಲಾ ಸಂಯೋಜಕ ಹರೀಶ್ ಜೋಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net