

ಮಂಗಳೂರು : ಬ್ಯಾಂಕಿಂಗ್ ಸೇವೆಯಲ್ಲಿ ರಾಷ್ಟ್ರಕ್ಕೆ ಮಾದರಿಯಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) 2022-23ನೇ ಸಾಲಿನಲ್ಲಿಸಾರ್ವಕಾಲಿಕ ಗರಿಷ್ಠ 61.29 ಕೋಟಿ ಲಾಭ ಗಳಿಸಿದೆ. ಶನಿವಾರ ಬ್ಯಾಂಕಿನ ಸಭಾಭವನದಲ್ಲಿ ನಡೆದ 109ನೇ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತನ್ನ ಸದಸ್ಯ ಸಂಘಗಳಿಗೆ ಶೇ.9 ಡಿವಿಡೆಂಡ್ ಘೋಷಿಸಿದರು.
ವರದಿ ವರ್ಷದಲ್ಲಿ ಬ್ಯಾಂಕ್ ಸಾಧಿಸಿದ ಯಶಸ್ಸು ಅಭೂತಪೂರ್ವವಾದದ್ದು. ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಕೋರ್ ಬ್ಯಾಂಕಿಂಗ್‌ನಂತಹ ಉನ್ನತ ಸೇವೆ ಬ್ಯಾಂಕಿನ 111 ಶಾಖೆಗಳಲ್ಲಿ ದೊರೆಯುತ್ತಿದೆ. ಮೊಬೈಲ್ ಆ್ಯಪ್, ಟ್ಯಾಬ್ ಬ್ಯಾಂಕಿಂಗ್‌ನಂತಹ ವಿನೂತನ ವ್ಯವಸ್ಥೆಯನ್ನು ಬ್ಯಾಂಕ್ ಗ್ರಾಹಕರಿಗೆ ಪರಿಚಯಿಸಿದೆ. ಮುಂದಿನ ದಿನಗಳಲ್ಲಿ ಇಮೀಡಿಯೇಟ್ ಪೇಮೆಂಟ್ ಸರ್ವಿಸ್ ಹಾಗೂ ಇಂಟರ್ ಬ್ಯಾಂಕಿಂಗ್ ಸೇವೆಯನ್ನು ರೂಪಿಸಲು ಬ್ಯಾಂಕ್ ಮುಂದಾಗಿದೆ ಎಂದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಈ ಸಂದರ್ಭ ತಿಳಿಸಿದರು.
*ಗುರಿ ಮೀರಿದ ಸಾಧನೆ:
ಬ್ಯಾಂಕ್ ವರದಿ ವರ್ಷದಲ್ಲಿ ಒಟ್ಟು 13514.51 ಕೋಟಿ ರೂ.ವ್ಯವಹಾರ ಸಾಧಿಸುವ ಮೂಲಕ ಗುರಿ ಮೀರಿದ ಸಾಧನೆಗೈದಿದೆ. ಒಟ್ಟು 6371.89 ಕೋಟಿ ರೂ.ಠೇವಣಿ ಸಂಗ್ರಹಿಸಿ, ಅತೀ ಹೆಚ್ಚು ಠೇವಣಿ ಸಂಗ್ರಹಿಸಿದ ರಾಜ್ಯದ ಪ್ರಥಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎನ್ನುವ ಕೀರ್ತಿಗೆ ಪಾತ್ರವಾಗಿದೆ . 5793.40 ಕೋಟಿ ರೂ.ಮುಂಗಡ ನೀಡಿದೆ. 1054 ಸಹಕಾರಿ ಸಂಘಗಳು ಬ್ಯಾಂಕಿಗೆ ಸದಸ್ಯರಾಗಿದ್ದು ಪಾಲು ಬಂಡವಾಳ 343.44 ಕೋಟಿ ರೂ., ಬ್ಯಾಂಕಿನ ದುಡಿಯುವ ಬಂಡವಾಳ 9930.69 ಕೋಟಿ ರೂ. ಹಾಗೂ ಬ್ಯಾಂಕ್ 240.82 ಕೋಟಿ ರೂ. ವಿವಿಧ ನಿಧಿಗಳನ್ನು ಹೊಂದಿದೆ ಎಂದು ಅವರು ತಿಳಿಸಿದರು.