ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ: ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ, ಪರಿಶೀಲನೆ

samikshe dc
Published on

ಮಡಿಕೇರಿ: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಮೇ೫ ರಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಗರದ ಉಕ್ಕುಡ ಬಳಿಯ ರಾಜರಾಜೇಶ್ವರಿ ಬಡಾವಣೆಗೆ ತೆರಳಿ ಬುಧವಾರ ವೀಕ್ಷಿಸಿದರು.

ಗೌರವಾನ್ವಿತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ ಅವರ ಏಕಸದಸ್ಯ ವಿಚಾರಣಾ ಆಯೋಗ ವತಿಯಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಬಗ್ಗೆ ಖುದ್ದು ಪರಿಶೀಲಿಸಿದರು.

ಮೊಬೈಲ್ ಅಪ್ಲಿಕೇಷನ್ ಮೂಲಕ ಮಾಹಿತಿ ತುಂಬುವ ಬಗ್ಗೆ ಪರಿಶೀಲಿಸಿದರು. ಸಮೀಕ್ಷೆದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಸಮೀಕ್ಷೆ ಅಪ್ಲಿಕೇಷನ್‌ಗೆ ಲಾಗಿನ್ ಆಗುವುದು. ಸಮೀಕ್ಷೆದಾರರ ಮೊಬೈಲ್ ಸಂಖ್ಯೆಗೆ ಒಟಿಪಿ ನಮೂದಿಸಿ ಲಾಗಿನ್ ಆಗುವುದು, ಸಮೀಕ್ಷೆ ಪ್ರಾರಂಭಿಸಿ ಎಂಬ ಟ್ಯಾಗ್‌ನ್ನು ಒಳಗೊಂಡು ಸಮೀಕ್ಷೆಗೆ ಕ್ಲಿಕ್ ಮಾಡುವುದು, ಹಾಗೆಯೇ ಮತದಾರರ ಪಟ್ಟಿಯಲ್ಲಿರುವ ಮನೆಗಳ ಆಧಾರದ ಮೇಲೆ ಸಮೀಕ್ಷೆ ಪ್ರಾರಂಭಿಸುವುದನ್ನು ವೀಕ್ಷಿಸಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಜಿಲ್ಲೆಯಲ್ಲಿ ೫೫೨ ಸಮೀಕ್ಷೆದಾರರನ್ನು ನಿಯೋಜಿಸಲಾಗಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ೨೭೫, ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ೨೭೭, ಮತಗಟ್ಟೆವಾರುನಂತೆ ಪರಿಶಿಷ್ಟ ಜಾತಿ ಕುಟುಂಬಗಳು ವಾಸಿಸುವ ಮನೆಗಳಿಗೆ ತೆರಳಿ ಸಮೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮೇ೧೭ ರವರೆಗೆ ಸಮೀಕ್ಷೆದಾರರು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಮೇ೧೯ ರಿಂದ ೨೧ ರವರೆಗೆ ಸಮೀಕ್ಷೆದಾರರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ನಡೆಸಲಿದ್ದಾರೆ. ಮೇ೧೯ ರಿಂದ ೨೩ ರವರೆಗೆ ಸ್ವಯಂ ಘೋಷಣೆ ಆನ್‌ಲೈನ್ ಮೂಲಕ ಮಾಹಿತಿ ಒದಗಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಮಾತನಾಡಿ, ಸರ್ಕಾರ ಪರಿಶಿಷ್ಟ ಜಾತಿಯ ಮೂಲಜಾತಿಗಳಿಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ಮಾಡಲು ಸರ್ಕಾರ ಉದ್ದೇಶಿಸಿದೆ. ಆ ನಿಟ್ಟಿನಲ್ಲಿ ಪರಿಶಿಷ್ಟ ಸಮುದಾಯದವರು ಈ ಸಮೀಕ್ಷೆ ಅವಕಾಶ ಬಳಸಿಕೊಳ್ಳಬೇಕು. ಸಮೀಕ್ಷೆ ವೇಳೆಯಲ್ಲಿ ಪರಿಶಿಷ್ಟ ಜಾತಿಯವರು ತಮ್ಮ ಮೂಲ ಜಾತಿ, ಶಿಕ್ಷಣ, ಉದ್ಯೋಗ, ಆದಾಯ ಮತ್ತಿತರ ಪ್ರಮುಖ ಮಾಹಿತಿ ಒದಗಿಸುವಂತಾಗಬೇಕು ಎಂದು ಕೋರಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಮಾತನಾಡಿ, ಗಣತಿದಾರರಾಗಿ ಶಾಲಾ ಶಿಕ್ಷಕರನ್ನು ನಿಯೋಜಿಸಲಾಗಿದ್ದು, ವ್ಯವಸ್ಥಿತವಾಗಿ ಗಣತಿ ಕೈಗೊಳ್ಳಲಾಗಿದ್ದು, ಸರ್ಕಾರದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ, ಗಣತಿದಾರರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net