ಏಪ್ರಿಲ್ ೧೪, ೨೦ ರಂದು ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ

alvas
Published on

ಮಡಿಕೇರಿ: ಏ.೧೪ ಹಾಗೂ ೨೦ರಂದು ಆಳ್ವಾಸ್ ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪ್ರತಿಯೊಬ್ಬರಿಗೂ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಪ್ರಸಾದ್ ಶೆಟ್ಟಿ ತಿಳಿಸಿದರು.


ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ ೧೦ ಕೋಟಿ ರೂ.ಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ. ಸಿಬಿಎಸ್‌ಸಿ, ಐಸಿಎಸ್‌ಇ ಮತ್ತು ರಾಜ್ಯ ಪಠ್ಯಕ್ರಮದ ಕನ್ನಡ ಮಾಧ್ಯಮ, ಇಂಗ್ಲಿಷ್ ಮಾಧ್ಯಮ ಶಾಲೆಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಅಲ್ಲದೇ, ೧೦ನೇ ತರಗತಿಯಲ್ಲಿ ಸಿಬಿಎಸ್‌ಸಿ, ಐಸಿಎಸ್‌ಇ ಹಾಗೂ ರಾಜ್ಯ ಪಠ್ಯಕ್ರಮ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳು ಶೈಕ್ಷಣಿಕ ವಿದ್ಯಾರ್ಥಿ ವೇತನ ಪಡೆಯಲು ಪರೀಕ್ಷೆ ಬರೆಯಬಹುದು. ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.


ಏ.೧೪ ಹಾಗೂ ಏ.೨೦ರಂದು ಎರಡು ದಿನಗಳ ಕಾಲ ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಸಾಮರ್ಥ್ಯ ಕುರಿತು ೧೨೦ ನಿಮಿಷಗಳ ಪರೀಕ್ಷೆ ನಡೆಯಲಿದೆ. ಸಿಬಿಎಸ್‌ಸಿ, ಐಸಿಎಸ್‌ಇ ಹಾಗೂ ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು ಮೂಡುಬಿದಿರೆಯ ವಿದ್ಯಾಗಿರಿ ಸುಂದರಿ ಆಳ್ವ ಆವರಣದಲ್ಲಿನ ಆಳ್ವಾಸ್ ಪದವಿಪೂರ್ವ ಕಾಲೇಜಿಗೆ ಆಗಮಿಸಿ ಪರೀಕ್ಷೆ ಬರೆಯಬಹುದು. ಇಂಗ್ಲಿಷ್ ಮಾಧ್ಯಮದಲ್ಲಿ ಪತ್ರಿಕೆ ಇರಲಿದೆ ಎಂದು ವಿವರಿಸಿದರು.


ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆಯ ಅಂಕದ ಆಧಾರದ ಮೇಲೆ ಆಯ್ಕೆಯ ಜತೆಯಲ್ಲಿ ಪ್ರತ್ಯೇಕವಾಗಿ ಪ್ರತಿ ವರ್ಷದಂತೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೆ ಆಯ್ಕೆಗಳು ನಡೆಯುತ್ತವೆ. ಪರೀಕ್ಷೆಯ ದಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಪಾಲಕರ ಜತೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಸಮಾಲೋಚನೆ ನಡೆಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು https://scholarship.alvas.org/ ಈ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.


ಸುದ್ದಿಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಕನ್ನಡ ವಿಭಾಗದ ಉಪನ್ಯಾಸಕ ಅರುಣ್ ಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net