ಶಾಲಾ-ಕಾಲೇಜುಗಳಲ್ಲಿ ಮೂಲಸೌಕರ್ಯಕ್ಕೆ ಆದ್ಯತೆ

31LNG02
ಲಿಂಗಸುಗೂರು ಜಿಟಿಟಿಸಿ ಕಾಲೇಜು ಬಾಲಕರ ವಸತಿ ನಿಲಯ ನಿರ್ಮಾಣ ಕಾಮಗಾರಿಗೆ ಶಾಸಕ ಮಾನಪ್ಪ ವಜ್ಜಲ್ ಭೂಮಿಪೂಜೆ ನೆರವೇರಿಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ, ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ, ನಯೋಪ್ರಾ ಅಧ್ಯಕ್ಷ ಭೂಪನಗೌಡ ಪಾಟೀಲ್, ಪ್ರಾಚಾರ್ಯೆ ಪ್ರತಿಭಾ ಪಾಟೀಲ್ ಇತರರಿದ್ದರು.
Published on

ಲಿಂಗಸುಗೂರು: ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಜನಪ್ರತಿನಿಧಿಗಳು, ಸಾರ್ವಜನಿಕರ ಸಹಕಾರ ಅಗತ್ಯ ಎಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.

ಪಟ್ಟಣದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ದ ಬಾಲಕರ ಹಾಸ್ಟೆಲ್ ಕಟ್ಟಡ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಕೆಕೆಆರ್‌ಡಿಬಿ ಯೋಜನೆಯಡಿ 2023-24ನೇ ಸಾಲಿನ ಮೂರು ಕೋಟಿ ರೂ. ವೆಚ್ಚದಲ್ಲಿ ಬಹುದಿನಗಳ ಬೇಡಿಕೆಯಾಗಿದ್ದ ವಸತಿ ನಿಲಯ ನಿರ್ಮಾಣಗೊಳ್ಳಲಿದೆ.

ಕ್ಷೇತ್ರದ ಶಾಲಾ-ಕಾಲೇಜುಗಳಲ್ಲಿ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗಿದೆ. 57 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಅಮೃತ ಯೋಜನೆಯಡಿ ವಾರ್ಡ್‌ಗಳಲ್ಲಿ ಪೈಪ್‌ಲೈನ್ ಅಳವಡಿಸಿದ ಬಳಿಕ ಸಿಸಿ ರಸ್ತೆ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮುರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಲ್ಲಿ ಹೈಮಾಸ್ಟ್ ದೀಪ ಅಳವಡಿಸಲಾಗಿದೆ. ಮುದಗಲ್ ಮತ್ತು ಜಲದುರ್ಗ ಕೋಟೆಗಳ ಅಭಿವೃದ್ಧಿಗೊಳಿಸಿ ಪ್ರವಾಸಿ ತಾಣವಾಗಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ ಮಾತನಾಡಿ, ರಾಜ್ಯ ಸರ್ಕಾರ ಪ್ರತಿವರ್ಷ ಕೆಕೆಆರ್‌ಡಿಬಿಗೆ ಐದು ಸಾವಿರ ಕೋಟಿ ರೂ. ನೀಡುತ್ತ ಬರುತ್ತಿದೆ. ಜಿಟಿಟಿಸಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಉದ್ಯೋಗ ಖಚಿತವಾಗಿ ದೊರೆಯಲಿದೆ. ಹೀಗಾಗಿ ವಸತಿ ನಿಲಯ ನಿರ್ಮಿಸಿದರೆ ತಾಲೂಕು ಹಾಗೂ ನೆರೆ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ, ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ, ನಯೋಪ್ರಾ ಅಧ್ಯಕ್ಷ ಭೂಪನಗೌಡ ಪಾಟೀಲ್, ಬಿಜೆಪಿ ಮಂಡಲ ಅಧ್ಯಕ್ಷ ಅಯ್ಯಪ್ಪ ವಕೀಲ, ಪ್ರಾಚಾರ್ಯೆ ಪ್ರತಿಭಾ ಪಾಟೀಲ್, ಪ್ರಮುಖರಾದ ಗಿರಿಮಲ್ಲನಗೌಡ ಪಾಟೀಲ್, ಪ್ರಮೋದ್ ಕುಲಕರ್ಣಿ, ಜೀವಲೆಪ್ಪ ನಾಯ್ಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net