

ಹನೂರು: ಶೈಕ್ಷಣಿಕ ವಲಯದ ಪೆದ್ದನಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.
ಗ್ರಾಮದಲ್ಲಿ ಶಾಲಾ ಜಾಗಕ್ಕೆ ಸಂಬಂಧಿಸಿದಂತೆ ಮಾರ್ಕಂಡ ಅವರು ದಾವೆ ಹೂಡಿದ್ದು, ಯಾವುದೇ ಕಾಮಗಾರಿಯನ್ನು ಕೈಗೊಳ್ಳದಂತೆ ನ್ಯಾಯಾಲಯದಿಂದ ತಾತ್ಕಾಲಿಕ ತಡೆಯಾಜ್ಞೆ ತಂದಿದ್ದರು. ಹಾಗಾಗಿ ಶಾಲೆಯ ಕೊಠಡಿಗಳು ತೀವ್ರ ಶಿಥಿಲಗೊಂಡಿದ್ದರೂ ನಿರ್ಮಿಸಲು ಸಾಧ್ಯವಾಗಿರಲಿಲ್ಲ. ಶಾಲಾ ಆವರಣದಲ್ಲಿ ಗಿಡಿಗಂಟಿಗಳು ಬೆಳೆದು ನಿಂತಿದ್ದರೂ ತೆರವುಗೊಳಿಸಲು ಸಾಧ್ಯವಾಗಿರಲಿಲ್ಲ. ಇತ್ತ ಕಾಂಪೌಂಡ್, ಕುಡಿಯುವ ನೀರು ಹಾಗೂ ಶೌಚಗೃಹವಿಲ್ಲದ ಪರಿಣಾಮ ಬೇಸತ್ತ ಪಾಲಕರು ಅಗತ್ಯ ಮೂಲ ಸೌಕರ್ಯವನ್ನು ಒದಗಿಸುವಂತೆ ಆ.11ರಿಂದ ಮಕ್ಕಳನ್ನು ಶಾಲೆಗೆ ಕಳಹಿಸದೇ 10 ದಿನಗಳ ಕಾಲ ಪ್ರತಿಭಟನೆ ನಡೆಸಿದ್ದರು. ಜಿಪಂ ಸಿಇಒ ಮೋನಾರೋತ್, ಡಿಡಿಪಿಐ ರಾಮಚಂದ್ರರಾಜೇ ಅರಸ್, ತಹಸೀಲ್ದಾರ್ ಕೆ.ಎನ್.ಚೈತ್ರಾ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದರು. ಆದರೆ ಸಮಸ್ಯೆ ಇತ್ಯರ್ಥವಾಗಿರಲಿಲ್ಲ. ಬಳಿಕ ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಶಾಲೆಗೆ ನ್ಯಾಯಾಧೀಶರು ಭೇಟಿ ನೀಡಿ ವಾಸ್ತವ ಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು.
ಬಳಿಕ ನ್ಯಾಯಾಧೀಶರು ಸೆ. 8ರಂದು ತಾತ್ಕಾಲಿಕ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದು, ಶಾಲೆಗೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ದೊರಕಿತ್ತು. ಈ ಹಿನ್ನೆಲೆ ಬುಧವಾರ ಸೂಕ್ತ ಪೊಲೀಸ್ ಬಂದೋಬಸ್ತ್‌ನೊಂದಿಗೆ ಕಾಂಪೌಂಡ್ ನಿರ್ಮಾಣಕ್ಕೆ ಚಾಲನೆ ದೊರೆತಿದ್ದು, ಮುಂದಿನ ದಿನಗಳಲ್ಲಿ ಶಾಲೆಗೆ ಅಗತ್ಯವಾದ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಇದರಿಂದ ಪಾಲಕರು, ಮಕ್ಕಳು, ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸಮಿತಿ ನಿಟ್ಟುಸಿರು ಬಿಟ್ಟಂತಾಗಿದೆ.