ಸಿಎಸ್‌ಆರ್ ನಿಧಿಯಿಂದ ಶಾಲಾಭಿವೃದ್ಧಿ ಸಾಧ್ಯ: ಶಿಕ್ಷಣ ತಜ್ಞ ಡಾ. ಎಂ.ಆರ್.ದೊರೆಸ್ವಾಮಿ

school
Published on

ಬೆಂಗಳೂರು: ಸರ್ಕಾರಿ ಶಾಲೆಗಳ ದತ್ತು ಯೋಜನೆ ಮುಂದುವರಿಸುವ ಜತೆಗೆ ಸಿಎಸ್‌ಆರ್ ನಿಧಿ ಬಳಸಿಕೊಂಡು ಶಾಲೆಗಳನ್ನು ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಸಾಧ್ಯವಿದೆ ಎಂದು ಶಿಕ್ಷಣ ತಜ್ಞ ಡಾ. ಎಂ.ಆರ್.ದೊರೆಸ್ವಾಮಿ ಅಭಿಪ್ರಾಯಪಟ್ಟರು.

ಬನಶಂಕರಿ 3ನೇ ಹಂತದ ಐಟಿಐ ಬಡಾವಣೆಯಲ್ಲಿ ಶ್ರೀಕೃಷ್ಣ ವಿದ್ಯಾ ಸಮೂಹ ಸಂಸ್ಥೆಯಿಂದ 5 ಸರ್ಕಾರಿ ಶಾಲೆಗಳ ದತ್ತು ಸ್ವೀಕರಿಸಿ ಅಭಿವೃದ್ಧಿಪಡಿಸಿ ಹಸ್ತಾಂತರ ಹಾಗೂ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಬ್ಯಾಗ್ ವಿತರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 42 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿದ್ದು, ಅಂದಾಜು ಅಂದಾಜು 50 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಪೈಕಿ 30 ಸಾವಿರ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ ಸಹಿತ ಇತರ ಮೂಲಸೌಕರ್ಯದ ಕೊರತೆ ಇದೆ. ಈ ಸಮಸ್ಯೆ ನಿವಾರಿಸಲು ಈಗಾಗಲೇ ಹಲವು ಶಾಲೆಗಳನ್ನು ಸಿಎಸ್‌ಆರ್ ನಿಧಿ ಮೂಲಕ ಅಭಿವೃದ್ಧಿಪಡಿಸಲಾಗಿದೆ. ಇನ್ನೂ ದೊಡ್ಡ ಸಂಖ್ಯೆಯಲ್ಲಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಅವಕಾಶವಿದ್ದು, ಕಾರ್ಪೊರೇಟ್ ಕಂಪನಿಗಳ ಸಹಕಾರ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದರು.

ಶಾಸಕ ಎಂ.ಕೃಷ್ಣಪ್ಪ ಮಾತನಾಡಿ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಿಂದ ಹಲವು ಶಾಲೆಗಳನ್ನು ದುರಸ್ತಿಪಡಿಸಲಾಗಿದೆ. ಸಾರ್ವಜನಿಕರು ಕೂಡ ತಮ್ಮ ಜನ್ಮದಿನ, ವಿಶೇಷ ಶುಭ ಸಮಾರಂಭ, ವ್ಯಾಪಾರ-ವಹಿವಾಟಿನಲ್ಲಿ ಸಿಗುವ ಲಾಭದ ಕೆಲ ಭಾಗವನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದೇಣಿಗೆಯಾಗಿ ನೀಡಬಹುದು ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net