

ಚಿತ್ರದುರ್ಗ: ಭವಿಷ್ಯತ್ತಿನ ನಾಯಕರ ಕರ್ತವ್ಯಗಳು, ಪದಾಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಎಸ್‌ಆರ್‌ಎಸ್ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಬಿ.ಎ. ಲಿಂಗಾರೆಡ್ಡಿ ಕಿವಿಮಾತು ಹೇಳಿದರು.
ನಗರದ ಎಸ್‌ಆರ್‌ಎಸ್ ಹೆರಿಟೇಜ್ ಶಾಲೆಯಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ ಪದಗ್ರಹಣ ಕಾರ್ಯಕ್ರಮಕ್ಕೆ ಶಾಂತಿಯ ಸಂಕೇತವಾದ ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಮಾತನಾಡಿ, ಪದಗ್ರಹಣ ಸಮಾರಂಭ ಶಾಲಾಹಂತದಲ್ಲಿಯೇ ಭವಿಷ್ಯದ ನಾಯಕರನ್ನು ರೂಪಿಸುವ ಪ್ರಕ್ರಿಯೆಯಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ ಮಾತನಾಡಿ, ಪ್ರಜಾಪ್ರಭುತ್ವ ಮಾದರಿಯಲ್ಲಿ ಆಯ್ಕೆಯಾದ ಪದಾಧಿಕಾರಿಗಳು ತಮ್ಮ ಅಧಿಕಾರಗಳೊಂದಿಗೆ, ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವುದಾಗಿ ಎಲ್ಲ ಗಣ್ಯರ ಸಮ್ಮುಖದಲ್ಲಿ ಪ್ರತಿಜ್ಞೆ ಮಾಡಿದ್ದು ಶ್ಲಾಘನೀಯ ಎಂದರು.
ಜಿಲ್ಲಾ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಜಿ.ಎಂ. ತಿಪ್ಪೇಸ್ವಾಮಿ ಮಾತನಾಡಿ, ಮುಂದಿನ ನಾಯಕರಾಗುವ ಬಗ್ಗೆ ಹಾಗೂ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಯಾವ ರೀತಿ ಕಾರ್ಯ ಪ್ರವೃತರಾಗಬೇಕು ಎಂದು ಮಕ್ಕಳಿಗೆ ಸೂಕ್ತ ರೀತಿಯಲ್ಲಿ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಕುಮಾರ್ ಮಾತನಾಡಿ, ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಪಡೆದ ಮಕ್ಕಳು ದೇಶ ಮತ್ತು ವಿದೇಶಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಸಂಸ್ಥೆಯು ಸುಸಜ್ಜಿತ ಶಾಲಾ ಕಟ್ಟಡ, ಸುಂದರ ಪರಿಸರ ಹೊಂದಿದೆ. ಇದು ವಿದ್ಯಾರ್ಥಿಯ ಜೀವನದ ಗುರಿ ಸಾಧಿಸಿ, ಪ್ರಗತಿ ಪಥದಲ್ಲಿ ಸಾಗಲು ನೆರವಾಗಲಿದೆ ಎಂದರು.
ಎಸ್‌ಆರ್‌ಎಸ್ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಡಾ.ಟಿ.ರವಿ, ಪ್ರಾಚಾರ್ಯ ಎಂ.ಎಸ್. ಪ್ರಭಾಕರ್, ಕೋ-ಆರ್ಡಿನೇಟರ್‌ಗಳಾದ ಜಗದೀಶ್, ವಿನೋದ್ ಅಲ್ಮೆಡಾ, ರಾಕೇಶ್, ಶಾಲೆಯ ಬೋಧಕ ಮತ್ತು ಬೋಧಕೇತರ ವರ್ಗದವರು ಭಾಗವಹಿಸಿದ್ದರು.