ಶಾಲೆ ಸಮಯ ಬದಲಾವಣೆ : ಮತ್ತೆ 8 ವಾರ ಕಾಲಾವಕಾಶ ನೀಡಿದ ಹೈಕೋರ್ಟ್

highcourt
Published on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿತ್ಯ ಉಂಟಾಗುತ್ತಿರುವ ಟ್ರಾಫಿಕ್ ಜಾಮ್ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಶಾಲೆ, ಕೈಗಾರಿಕೆ, ವಾಣಿಜ್ಯ ಮತ್ತು ಕಂಪನಿಗಳ ಕೆಲಸದ ಅವಧಿ ಬದಲಾವಣೆ ಮಾಡುವ ಸಾಧ್ಯತೆಯ ಬಗ್ಗೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸಮಗ್ರವಾದ ವರದಿ ಸಲ್ಲಿಸಲು ಸರ್ಕಾರಕ್ಕೆ ಮತ್ತೆ ಎಂಟು ವಾರಗಳ ಕಾಲಾವಕಾಶವನ್ನು ಹೈಕೋರ್ಟ್ ನೀಡಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಬಳ್ಳಾರಿ ರಸ್ತೆಯಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಬಸವೇಶ್ವರ ವೃತ್ತದಿಂದ ಹೆಬ್ಬಾಳದ ಎಸ್ಟೀಮ್ ಮಾಲ್‌ವರೆಗೆ ರಸ್ತೆ ಅಗಲೀಕರಣ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಮರ್ಪಣ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಸರ್ಕಾರಕ್ಕೆ ಕಾಲಾವಕಾಶ ನೀಡಿದೆ.
ಅರ್ಜಿಯನ್ನು ಸೆ.12 ವಿಚಾರಣೆ ನಡೆಸಿದ್ದ ನ್ಯಾಯಾಲಯ, ಬೆಂಗಳೂರು ನಗರದಲ್ಲಿ ನಿತ್ಯ ಉಂಟಾಗುತ್ತಿರುವ ಸಂಚಾರದ ದಟ್ಟಣೆ ಸಮಸ್ಯೆ ನಿವಾರಿಸಬೇಕಿದೆ. ಈ ನಿಟ್ಟಿನಲ್ಲಿ ಶಾಲೆಗಳ ಕೆಲಸದ ಅವಧಿಯನ್ನು ಬದಲಾವಣೆ ಮಾಡುವ ಕುರಿತಂತೆ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಮೂಲಕ ಖಾಸಗಿ ಹಾಗೂ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ ಬಸ್ ಆಪರೇಟರ್‌ಗಳು, ಪಾಲಕರ ಸಂಘಗಳು ಪ್ರತಿನಿಧಿಗಳ ಜತೆಗೆ ಸಭೆ ಕರೆದು ಸಮಾಲೋಚಿಸಿ ಆರು ವಾರಗಳಲ್ಲಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು.
ಮಂಗಳವಾರ ಅರ್ಜಿ ವಿಚಾರಣೆಗೆ ಬಂದಾಗ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು ಹಾಜರಾಗಿ , ಹೈಕೋರ್ಟ್ ನಿರ್ದೇಶನದಂತೆ ಸಂಬಂಧಪಟ್ಟವರ ತೆಗೆ ಸರ್ಕಾರ ಸಮಾಲೋಚನೆ ನಡೆಸಿದೆ. ಅ.೫ರಂದು ಕಾರ್ಮಿಕ ಇಲಾಖೆ, ಎಫ್‌ಕೆಸಿಸಿಐ, ವಾಣಿಜ್ಯೋದ್ಯಮಿಗಳು ಹಾಗೂ ಕಾರ್ಮಿಕರ ಒಕ್ಕೂಟಗಳ ಪ್ರತಿನಿಧಿಗಳ ಜತೆಗೆ ಸಮಾಲೋಚನೆ ನಡೆಸಲಾಗಿದೆ. ಅ.೯ರಂದು ಶಾಲಾ ಆಡಳಿತ ಮಂಡಳಿ, ಪಾಲಕರ ಒಕ್ಕೂಟದೊಂದಿಗೆ ಸಭೆ ನಡೆಸಲಾಯಿತು. ಹಾಗೆಯೇ, ಸಾರಿಗೆ ಮತ್ತು ಸಂಚಾರ ವಿಭಾಗದ ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೂ ಸಭೆ ನಡೆಸಲಾಗಿದೆ. ಸಂಚಾರ ದಟ್ಟಣೆಗೆ ಪರಿಹಾರ ಕಂಡುಹಿಡಿಯಲು ಸಮಾಲೋಚನ್ ಪ್ರಕ್ರಿಯೆ ಮುಂದುವರಿಯಲಿದ್ದು, ಅಂತಿಮ ಅಭಿಪ್ರಾಯ ಕುರಿತಂತೆ ವರದಿ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದರು.
ಆ ಮನವಿ ಪರಿಗಣಿಸಿದ ಹೈಕೋರ್ಟ್, ನ್ಯಾಯಾಲಯದ ಸೂಚನೆಯ ಮೇರೆಗೆ ಸರ್ಕಾರವು ಸಂಬಂಧಪಟ್ಟವರೊಂದಿಗೆ ಸಭೆ ನಡೆಸಿ ಚರ್ಚಿಸಿ, ಅಭಿಪ್ರಾಯ ಸಂಗ್ರಹ ಮಾಡುತ್ತಿದೆ. ಸಭೆಯಲ್ಲಿ ಸಂಬಂಧಪಟ್ಟವರು ಪಾಲುದಾರರು ಭಾಗವಹಿಸಿದ್ದು, ಸಭೆಯ ಅಂತಿಮ ನಿರ್ಧಾರ ತೀರ್ಮಾನಕ್ಕೆ ಬರಬೇಕಿದೆ. ಇದು ಒಂದು ಪ್ರಕ್ರಿಯೆಯಾಗಿದ್ದು, ತೀರ್ಮಾನ ಏನೆಂಬುದನ್ನು ಎದುರು ನೋಡಬೇಕಿದೆ. ಆ ಕುರಿತಂತೆ ಸಮಗ್ರವಾದ ವರದಿ ಸಲ್ಲಿಸಲು ಸರ್ಕಾರಕ್ಕೆ ಕಾಲಾವಕಾಶ ನೀಡಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಎಂಟು ವಾರ ಕಾಲಾವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net