ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಮೇಳಕ್ಕೆ ತೆರೆ

Scout
Published on

ಕುಶಾಲನಗರ:

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ, ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಎರಡು ದಿನಗಳ ಕಾಲ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಮೇಳಕ್ಕೆ ಭಾನುವಾರ ಸಂಜೆ ವರ್ಣರಂಜಿತ ತೆರೆ ಬಿತ್ತು..

ಜಿಲ್ಲೆಯ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಂದ ಆಗಮಿಸಿದ್ದ 600 ಮಕ್ಕಳು ಎರಡು ದಿನಗಳ ಸ್ಕೌಟ್ಸ್ ಮತ್ತು ಗೈಡ್ಸ್ ವಿವಿಧ ತರಬೇತಿ ಮತ್ತು ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಶಿಕ್ಷಕರು ತರಬೇತಿ ನಿರತ ವಿದ್ಯಾರ್ಥಿಗಳಿಗೆ ವಿವಿಧ ಅಭ್ಯಾಸಾತ್ಮಕ ತರಬೇತಿ ನೀಡಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿಮ್ಯಾಥ್ಯೂ ಈ ಸಂದರ್ಭ ಮಾತನಾಡಿ, ಸ್ಕೌಟ್, ಗೈಡ್ ಆಂದೋಲನದ ಉದ್ದೇಶ ವಿದ್ಯಾರ್ಥಿಗಳು ಮತ್ತು ಯುವಕರಲ್ಲಿ ಉತ್ತಮ ನಾಯಕತ್ವದೊಂದಿಗೆ ದೈಹಿಕ, ಬೌದ್ಧಿಕ, ಸಾಮಾಜಿಕ, ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಯಲ್ಲಿ ಸಹಾಯ ಮಾಡುವ ಮೂಲಕ ಅವರನ್ನು ಸ್ಥಳೀಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಮುದಾಯದ ಜವಾಬ್ದಾರಿಯುತ ಉತ್ತಮ ನಾಗರಿಕರನ್ನಾಗಿ ರೂಪಿಸುವುದಾಗಿದೆ. ಶಾಲಾ ಮಕ್ಕಳಲ್ಲಿ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕತೆ ಮತ್ತು ರಾಷ್ಟ್ರೀಯ ಭಾವೈಕ್ಯತೆ ಹಾಗೂ ಸಾಮಾಜಿಕ ಮೌಲ್ಯಗಳನ್ನು

ಬೆಳೆಸುವ ಉದ್ದೇಶ ಹೊಂದಲಾಗಿದೆ ಎಂದರು.

ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ. ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಸ್ಕೌಟ್ಸ್, ಗೈಡ್ಸ್

ಮಕ್ಕಳ ಮೇಳ ಮಕ್ಕಳಲ್ಲಿ ಪರಸ್ಪರ ಪ್ರೀತಿ- ವಿಶ್ವಾಸ, ಸ್ನೇಹಪರತೆ ಹಾಗೂ ಏಕತೆ ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದು ಹೇಳಿದರು.

ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ ಎರಡು ದಿನಗಳ ಕಾಲ ಮಕ್ಕಳ ಮೇಳದಲ್ಲಿ ಮಕ್ಕಳಿಗೆ ಕಲಿಸಲಾದ ತರಬೇತಿ ವಿವರಗಳನ್ನು ತಿಳಿಸಿದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಮಾತನಾಡಿ, ಉತ್ತಮ ನಾಯಕತ್ವ ಗುಣ, ರಾಷ್ಟ್ರೀಯ ಭಾವೈಕ್ಯತೆ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯ ಎಂದರು. ಜಿಲ್ಲಾ ಪ್ರೌಢಶಾಲಾ ದೈಹಿಕ ಶಿಕ್ಷಣ ಸಂಘ ( ಗ್ರೇಡ್ - 1 ) ದ ಅಧ್ಯಕ್ಷ ಡಾ. ಸದಾಶಿವಯ್ಯ ಎಸ್. ಪಲ್ಲೇದ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರೂ ಆದ ಜಿಲ್ಲಾ ಗೈಡ್ಸ್ ಆಯುಕ್ತೆ ರಾಣಿ ಮಾಚಯ್ಯ, ಸ್ಥಾನೀಕ ಆಯುಕ್ತ ಎಚ್.ಆರ್. ಮುತ್ತಪ್ಪ, ಕೋಶಾಧಿಕಾರಿ ಟಿ.ಎಂ. ಮುದ್ದಯ್ಯ, ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ ಗೈಡ್ಸ್ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net