

ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮಗಳನ್ನು ಆದಷ್ಟು ಶೀಘ್ರ ಆದ್ಯತೆ ಮೇಲೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.
ನಗರದ ಜಿಲ್ಲಾಧಿಕಾರಿರವರ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಇಂತಿಷ್ಟು ಹಣ ಎಂದು ನಿಗಧಿ ಮಾಡಿದ್ದು, ಪ್ರಥಮ ಆದ್ಯತೆಯಲ್ಲಿ ಪ್ರಗತಿ ಸಾಧಿಸಬೇಕು. ಡಿಸೆಂಬರ್, ಜನವರಿ ಮತ್ತು ಫೆಬ್ರವರಿಯಲ್ಲಿ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ. ಮಾರ್ಚ್-ಏಪ್ರಿಲ್ ನಲ್ಲಿ ಲೋಕಸಭಾ ಚುನಾವಣೆ ಬರಲಿದೆ. ಆದ್ದರಿಂದ ಆದಷ್ಟು ಶೀಘ್ರ ಇಲಾಖೆ ಕಾರ್ಯಕ್ರಮಗಳ ಆರ್ಥಿಕ ಮತ್ತು ಭೌತಿಕ ಗುರಿಯ ಪ್ರಗತಿ ಸಾಧಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರದ ಆಶಯವನ್ನು ಅರ್ಥಮಾಡಿಕೊಂಡು ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಕಚೇರಿ ಮುಖ್ಯಸ್ಥರ ಜವಾಬ್ದಾರಿ ಹೆಚ್ಚಿನದ್ದಾಗಿದೆ. ಆ ನಿಟ್ಟಿನಲ್ಲಿ ಆದ್ಯತೆ ಮೇಲೆ ಪರಿಶೀಷ್ಟರಿಗೆ ಮೂಲ ಸೌಲಭ್ಯ ಕಲ್ಪಿಸಲು ಮುಂದಾಗಬೇಕು. ಕಾಲಮಿತಿಯಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಎಸ್.ಹೊನ್ನೇಗೌಡರವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಗೌರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ಅಧಿಕಾರಿ ನಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಬಿಂದು, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ಸಾರಿಗೆ ಇಲಾಖೆಯ ರೀಟಾ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖೆಯ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ನೀಡಿದರು.